ಬೆಂಗಳೂರು,ಏ.16: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಭರ್ಜರಿ ಬೇಟೆ ಮುಂದುವರಿಸಿದ್ದಾರೆ.
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿ ಬನ್ನೇರುಘಟ್ಟ ಮುಖ್ಯ ರಸ್ತೆಯ ಕೊಪ್ಪ ಚೆಕ್ಪೋಸ್ಟ್ ಬಳಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5.20 ಲಕ್ಷ ರೂ. ಹಣವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ನಿನ್ನೆ ಚುನಾವಣೆ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದ ವೇಳೆ ಮಧು ಎಂಬವರು ಬ್ಯಾಂಕ್ನಿಂದ ಡ್ರಾ ಮಾಡಿ ಹಣ ತೆಗೆದುಕೊಂಡು ಹೋಗುತ್ತಿದ್ದರು. ಅತ್ತಿಬೆಲೆಯ ಜೆ.ಕೆ ಇಂಡಸ್ಟ್ರೀಸ್ಗೆ ತೆಗೆದುಕೊಂಡು ಹೋಗುತ್ತಿದ್ದ ಹಣ ಎಂದು ತಿಳಿದು ಬಂದಿದೆ.
ಚುನಾವಣೆ ಚೆಕ್ಪೋಸ್ಟ್ನಲ್ಲಿ ತಪಾಸಣೆ ಮಾಡುತ್ತಿದ್ದಾಗ ವೇಳೆ ಬೈಕ್ನಲ್ಲಿ ಹಣ ಇದ್ದುದು ಗೊತ್ತಾಗಿದೆ, ಹಣಕ್ಕೆ ಸೂಕ್ತ ದಾಖಲೆ ನೀಡದ ಹಿನ್ನೆಲೆಯಲ್ಲಿ ಜಿಗಣಿ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಹಣವನ್ನು ಸೀಜ್ ಮಾಡಿದ್ದಾರೆ.
ಮತ್ತೊಂದೆಡೆ, ಚುನಾವಣಾ ಅಧಿಕಾರಿಗಳು ಕಾರ್ಯಚರಣೆ ನಡೆಸಿ ಲೋಕಸಭಾ ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ಕುಕ್ಕರ್ಗಳನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ನೆಲಮಂಗಲದ ಜಾಸ್ ಟೋಲ್ ಚೆಕ್ಪೋಸ್ಟ್ನಲ್ಲಿ 302 ಕುಕ್ಕರ್ಗಳನ್ನು ವಶಕ್ಕೆ ಪಡೆದಿದ್ದಾರೆ.
ವಸ್ತುಗಳನ್ನು ಬೆಂಗಳೂರಿನಿಂದ ಹುಬ್ಬಳ್ಳಿಗೆ ಕ್ಯಾಂಟರ್ ವಾಹನ ಮೂಲಕ ಸಾಗಿಸಲಾಗುತ್ತಿತ್ತು. ಚಾಲಕ ಈರಣ್ಣ ಎಂಬಾತನನ್ನು ಪೊಲೀಸರು ವಿಚಾರಣೆ ನಡೆಸಿ, ಸುಮಾರು 4 ಲಕ್ಷ ರೂ. ಮೌಲ್ಯದ ಕುಕ್ಕರ್ ವಶಪಡಿಸಿಕೊಂಡಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.