ಬೆಳಗಾವಿ: ಪ್ರತಿಪಕ್ಷಗಳಿಂದ ಸಾಕಷ್ಟು ವಿರೋಧ ವ್ಯಕ್ತವಾಗಿದ್ದ 2025ನೇ ಸಾಲಿನ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿದ ಸರ್ಕಾರ ವಿಪಕ್ಷಗಳ ವಿರೋಧದ ನಡುವೆಯೂ ವಿಧಾನಸಭೆಯ ಅಂಗೀಕಾರ ಪಡೆದುಕೊಳ್ಳುವಲ್ಲಿ ಸಫಲವಾಯಿತು.
ವಿಧಾನಸಭೆ ಶಾಸನರಚನಾ ಕಲಾಪದಲ್ಲಿ ಗೃಹಸಚಿವ ಡಾ:ಜಿ.ಪರಮೇಶ್ವರ್ 2025ನೇ ಸಾಲಿನ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕವನ್ನು ಮಂಡಿಸಿದರು. ನಂತರ ವಿಧೇಯಕದ ಕುರಿತು ವಿವರಣೆ ನೀಡಿದ ಅವರು, ಈ ವಿಧೇಯಕವು ವ್ಯಕ್ತಿ ವ್ಯಕ್ತಿಗಳ ಸಮೂಹ, ಸಂಸ್ಥೆಗಳ ವಿರುದ್ಧ ಸಮಾಜದಲ್ಲಿ ಅಸಾಮರಸ್ಯ ದ್ವೇಷವನ್ನುಂಟು ಮಾಡುವ ದ್ವೇಷಭಾಷಣದ ಪ್ರಸರಣೆ, ಪ್ರಕಟಣೆ ಅಥವಾ ಪ್ರಚಾರವನ್ನು ಹಾಗೂ ಅಪರಾಧಗಳನ್ನು ತಡೆಗಟ್ಟಲು ಮತ್ತು ಪ್ರತಿಬಂಧಿಸಲು, ಅಂತಹ ಅಪರಾಧಗಳಿಗೆ ದಂಡನೆಯನ್ನು ಉಪಬಂದಿಸಲು ಹಾಗೂ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಕಷ್ಟು ಪರಿಹಾರವನ್ನು ಒದಗಿಸಲು ಈ ಶಾಸನವನ್ನು ಅಧಿನಿಯಮಿಸುವುದು ಅವಶ್ಯಕವೆಂದು ಪರಿಗಣಿಸಿ ಈ ವಿಧೇಯಕವನ್ನು ತರಲಾಗಿದೆ ಎಂದರು.
ವಿಪಕ್ಷಗಳ ವಿರೋಧ ಟೀಕೆಗಳ ನಂತರ ವಿಧೇಯಕವನ್ನು ಪರ್ಯಾಲೋಚಿಸಿ ಅನುಮೋದನೆ ನೀಡುವಂತೆ ಗೃಹ ಸಚಿವರು ಸದನವನ್ನು ಕೋರಿದರು. ಅಂತಿಮವಾಗಿ ವಿಧೇಯಕವು ಧ್ವನಿಮತದ ಮೂಲಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು.

