Fri. Mar 6th, 2026

ಚಿತ್ರದುರ್ಗ ರಸ್ತೆ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಕೇಂದ್ರ,ರಾಜ್ಯ ಸರ್ಕಾರ

Share this with Friends

ಬೆಂಗಳೂರು:ಹಿರಿಯೂರು ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 2 ಲಕ್ಷ, ರಾಜ್ಯ ಸರ್ಕಾರ ತಲಾ 5 ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದು ಗಾಯಾಳುಗಳಿಗೆ ಉಭಯ ಸರ್ಕಾರಗಳೂ ತಲಾ 50 ಸಾವಿರ ಪರಿಹಾರ ಪ್ರಕಟಿಸಿವೆ.

ಈ ಕುರಿತು ಪ್ರಕಟಣೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್‌)ಯಿಂದ 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ,ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ.ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಎಂದು ತಿಳಿಸಿದ್ದಾರೆ.

ಇದೇ ವೇಳೆ ಚಿತ್ರದುರ್ಗದಲ್ಲಿ‌ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು. ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ‌ ಲಭಿಸಲಿ‌ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.


Share this with Friends

Related Post