ಗದಗ: ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಇಂದು ನಸುಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮಹಿಳಾ ಕೃಷಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ನಡೆದಿದೆ,ಅಪಘಾತದಲ್ಲಿ15ಕ್ಕೂ ಹೆಚ್ಚು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.ಈ ಸಂಬಂಧ ರೋಣಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಜೇಂದ್ರಗಡದ ಶಿವಾಜಿ ನಗರದಿಂದ ಕೂಲಿ ಕೆಲಸಕ್ಕಾಗಿ ರೋಣಕ್ಕೆ ತೆರಳುತ್ತಿದ್ದ ಕಾರ್ಮಿಕರಿದ್ದ ಕ್ರೂಸರ್ ವಾಹನ ಹಾಗೂ ಎದುರಿನಿಂದ ಬಂದ ಕ್ಯಾಂಟರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಈ ರಸ್ತೆ ಅಪಘಾತದ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣವಾಗಿ ಜರ್ಜರಿತವಾಗಿದೆ, ಮೂವರು ಮಹಿಳೆಯರು ದುರ್ಮರಣಕ್ಕೀಡಾಗಿದ್ದು,ಮೃತರನ್ನು ಮರಿಮಬೀ ಹುನಗುಂದ, ಅನ್ನಪೂರ್ಣ ಬಾಗೋಜಿ ಹಾಗೂ ಸುಜಾತಾ ಹೊಸಮನಿ ಎಂದು ಗುರುತಿಸಲಾಗಿದೆ.
ಇನ್ನು 15ಕ್ಕೂ ಹೆಚ್ಚು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅದರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ರೋಣ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.ವೇಗದ ಚಾಲನೆ ಮತ್ತು ಕ್ಯಾಂಟರ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ರೋಹನ್ ಜಗದೀಶ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

