ಬೆಂಗಳೂರು: “ರಾಜ್ಯದಲ್ಲಿ ಮುಂಬರುವ ಐದು ಮಹಾನಗರ ಪಾಲಿಕೆಗಳ (GBA) ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಜಯ ದಾಖಲಿಸಲಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶನಿವಾರ ದೃಢ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ನಡೆದ ಚುನಾವಣಾ ಉಸ್ತುವಾರಿಗಳ ಮಹತ್ವದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಜೆಪಿಯು ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದೆ. ಬೆಂಗಳೂರಿನ ಅಭಿವೃದ್ಧಿ ಹೆಸರಿನಲ್ಲಿ ಕಾಂಗ್ರೆಸ್ ಕೇವಲ ಬೂಟಾಟಿಕೆ ಮಾಡುತ್ತಿದೆ. ರಸ್ತೆ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗದ ಸರ್ಕಾರಕ್ಕೆ ನಗರದ ಜನತೆ ಈ ಬಾರಿ ತಕ್ಕ ಪಾಠ ಕಲಿಸಲಿದ್ದಾರೆ. ಕಾಂಗ್ರೆಸ್ ಸರ್ಕಾರದ ವೈಫಲ್ಯಗಳೇ ಬಿಜೆಪಿಯ ಗೆಲುವಿಗೆ ಶ್ರೀರಕ್ಷೆಯಾಗಲಿವೆ ಎಂದರು.
ಫೆಬ್ರವರಿ 28 ಮತ್ತು ಮಾರ್ಚ್ 1 ರಂದು ಈ ಪಾಲಿಕೆಗಳ ವ್ಯಾಪ್ತಿಯಲ್ಲಿ ಪ್ರತ್ಯೇಕ ಸಭೆಗಳನ್ನು ನಡೆಸಿ, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು. ಮೈತ್ರಿ ಧರ್ಮದಂತೆ ಜೆಡಿಎಸ್ ನಾಯಕರೊಂದಿಗೆ ಚರ್ಚಿಸಲು ಹಿರಿಯ ನಾಯಕರ ತಂಡವನ್ನು ರಚಿಸಲಾಗುವುದು. ಸೀಟು ಹಂಚಿಕೆ ಕುರಿತು ರಾಷ್ಟ್ರೀಯ ನಾಯಕರ ಮಾರ್ಗದರ್ಶನದಂತೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಅಬಕಾರಿ ಹಗರಣ: ಸಿಬಿಐ ತನಿಖೆಗೆ ಒತ್ತಾಯ
ಅಬಕಾರಿ ಇಲಾಖೆಯಲ್ಲಿ ಸುಮಾರು 6,000 ಕೋಟಿ ರೂಪಾಯಿಗಳ ಬೃಹತ್ ಹಗರಣ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ ವಿಜಯೇಂದ್ರ, “ಸ್ವತಃ ಇಲಾಖೆಯ ಉನ್ನತ ಅಧಿಕಾರಿಗಳೇ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತಿದ್ದಾರೆ. ಸಚಿವರ ಕುಟುಂಬದ ಸದಸ್ಯರು ಈ ದಂಧೆಯಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂಬ ದಾಖಲೆಗಳಿವೆ. ಆದರೂ ಸಿಎಂ ಸಿದ್ದರಾಮಯ್ಯ ಅವರು ಸಚಿವರನ್ನು ರಕ್ಷಿಸುತ್ತಿರುವುದು ನಾಚಿಕೆಗೇಡು. ಈ ಪ್ರಕರಣವನ್ನು ತಕ್ಷಣವೇ ಸಿಬಿಐ ಅಥವಾ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು,” ಎಂದು ಒತ್ತಾಯಿಸಿದರು.
ಇತ್ತೀಚಿನ ದೆಹಲಿ ಭೇಟಿಯ ವೇಳೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ರಾಜ್ಯದಲ್ಲಿ ಪಕ್ಷವನ್ನು ಬೂತ್ ಮಟ್ಟದಿಂದ ಬಲಪಡಿಸಲು ಮತ್ತು ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜನಾಂದೋಲನ ರೂಪಿಸಲು ಸೂಚನೆ ನೀಡಿದ್ದಾರೆ. ಕಾಂಗ್ರೆಸ್‌ನ ಭ್ರಷ್ಟಾಚಾರವನ್ನು ಬಯಲಿಗೆಳೆಯಲು ಶೀಘ್ರದಲ್ಲೇ ‘ಬಳ್ಳಾರಿ ಚಲೋ’ ಪಾದಯಾತ್ರೆಯ ದಿನಾಂಕ ಮತ್ತು ರೂಪುರೇಷೆಗಳನ್ನು ಪ್ರಕಟಿಸಲಾಗುವುದು. ಮೆಕ್ಕೆಜೋಳ ಮತ್ತು ಕಬ್ಬು ಬೆಳೆಗಾರರ ಸಮಸ್ಯೆಗೆ ಸರ್ಕಾರ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಬಿಜೆಪಿ ರೈತ ಮೋರ್ಚಾದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. “ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ತನ್ನ ‘ಎಟಿಎಂ’ ಆಗಿ ಬಳಸಿಕೊಳ್ಳುತ್ತಿದೆ. ವರ್ಗಾವಣೆ ದಂಧೆ ಮತ್ತು ಕಮಿಷನ್ ಹಾವಳಿ ಮಿತಿಮೀರಿದೆ. ನಾವು ಜನರ ಧ್ವನಿಯಾಗಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ಮುಂದುವರಿಸುತ್ತೇವೆ ಎಂದರು.”

