Fri. Mar 6th, 2026

ಫೆ. 19ಕ್ಕೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ: ಬಿ.ವೈ. ವಿಜಯೇಂದ್ರ

Share this with Friends

ಬೆಳಗಾವಿ:”ರಾಜ್ಯದ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿಯನ್ನು ಬಲಿಗೊಟ್ಟು ಕೇವಲ ಅಧಿಕಾರ ಉಳಿಸಿಕೊಳ್ಳುವ ಕಸರತ್ತು ನಡೆಸುತ್ತಿದೆ. ಸರ್ಕಾರದ ಈ ಜನವಿರೋಧಿ ಧೋರಣೆಗಳನ್ನು ಖಂಡಿಸಿ ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸಲು ಫೆಬ್ರವರಿ 19 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಲಾಗಿದೆ,” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಫೆಬ್ರವರಿ 19 ರಂದು ನಡೆಯಲಿರುವ ಸಭೆಯಲ್ಲಿ ರಾಜ್ಯದಾದ್ಯಂತ ಇರುವ ಪಕ್ಷದ ಪ್ರಮುಖ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಬಿಬಿಎಂಪಿ ಚುನಾವಣೆಗಳಿಗೆ ‘ಬೂತ್ ಮಟ್ಟದ ಸಂಘಟನೆ’ಯನ್ನು ಬಲಪಡಿಸುವುದು ಈ ಸಭೆಯ ಮುಖ್ಯ ಗುರಿಯಾಗಿದೆ ಎಂದರು.

ಅನುದಾನದ ಕೊರತೆ ಮತ್ತು ವಿದೇಶ ಪ್ರವಾಸ:

ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ. ಕಾಂಗ್ರೆಸ್ ಶಾಸಕರೇ ಅನುದಾನ ಸಿಗುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ಆಕ್ರೋಶವನ್ನು ತಣಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸುವ ಮೂಲಕ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ವಿಜಯೇಂದ್ರ ಕಿಡಿಕಾರಿದರು.

ಶ್ವೇತಪತ್ರಕ್ಕೆ ಆಗ್ರಹ:

“ಗೃಹಲಕ್ಷ್ಮಿ ಯೋಜನೆಗೆ ಮೀಸಲಿಟ್ಟ ಸುಮಾರು 5,000 ಕೋಟಿ ರೂಪಾಯಿಗಳ ಅನುದಾನ ಎಲ್ಲಿದೆ?” ಎಂದು ಪ್ರಶ್ನಿಸಿದ ಅವರು, ಈ ಯೋಜನೆಯ ಅನುಷ್ಠಾನದ ಬಗ್ಗೆ ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಹಿಂದುಳಿದ ವರ್ಗಗಳ ಕಡೆಗಣನೆ:

ರಾಜ್ಯದಲ್ಲಿ ಹಿಂದುಳಿದ ವರ್ಗಗಳ 1.41 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ಪ್ರವೇಶ ಸಿಗುತ್ತಿಲ್ಲ. ಲಕ್ಷಾಂತರ ಸರ್ಕಾರಿ ಹುದ್ದೆಗಳು ಖಾಲಿ ಬಿದ್ದಿದ್ದರೂ ನೇಮಕಾತಿ ಪ್ರಕ್ರಿಯೆ ನಡೆಸದೆ ಯುವ ಸಮುದಾಯಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಬಜೆಟ್ ಪ್ರಶಂಸೆ:

ಇದೇ ವೇಳೆ ಕೇಂದ್ರದ ಬಜೆಟ್ ಅನ್ನು ಶ್ಲಾಘಿಸಿದ ಅವರು, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ದೇಶವು ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುತ್ತಿದೆ. ಆದರೆ ರಾಜ್ಯ ಸರ್ಕಾರವು ರಾಜಕೀಯ ಲಾಭಕ್ಕಾಗಿ ಕೇಂದ್ರದ ವಿರುದ್ಧ ಸುಳ್ಳು ಅಪಪ್ರಚಾರ ಮಾಡುತ್ತಿದೆ ಎಂದು ಟೀಕಿಸಿದರು.

ಸಿದ್ದರಾಮಯ್ಯ ಸರ್ಕಾರಕ್ಕೆ ‘ತುಷ್ಟೀಕರಣ’ದ ವ್ಯಾಧಿ: 

“ರಾಜ್ಯದ ಕಾಂಗ್ರೆಸ್ ಸರ್ಕಾರ ಕೇವಲ ಒಂದು ಸಮುದಾಯದ ಓಲೈಕೆಗಾಗಿ ಆಡಳಿತ ನಡೆಸುತ್ತಿದೆ. ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಾಲದ ಬಡ್ಡಿ ಮನ್ನಾ ಮಾಡುವ ನಿರ್ಧಾರವು ಇತರ ಹಿಂದುಳಿದ ವರ್ಗ ಹಾಗೂ ದಲಿತ ಸಮುದಾಯಗಳಿಗೆ ಮಾಡಿದ ದ್ರೋಹ,” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಮೂಲಕ ಪಡೆದ ಸಾಲದ ಬಡ್ಡಿಯನ್ನು ಮನ್ನಾ ಮಾಡುವ ಸರ್ಕಾರದ ನಿರ್ಧಾರದ ಹಿಂದೆ ಸ್ಪಷ್ಟವಾದ ಮತಬ್ಯಾಂಕ್ ರಾಜಕಾರಣ ಅಡಗಿದೆ. “ಒಂದು ಕಣ್ಣಿಗೆ ಸುಣ್ಣ, ಒಂದು ಕಣ್ಣಿಗೆ ಬೆಣ್ಣೆ ಹಚ್ಚುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತರ ಸಾಲದ ಬಡ್ಡಿ ಮನ್ನಾ ಮಾಡುವ ಇವರಿಗೆ, ಸಂಕಷ್ಟದಲ್ಲಿರುವ ರಾಜ್ಯದ ರೈತರ ಸಾಲ ಮನ್ನಾ ಮಾಡಲು ಮನಸ್ಸಿಲ್ಲವೇಕೆ?” ಎಂದು ಅವರು ಪ್ರಶ್ನಿಸಿದರು.

ದಲಿತರು, ಹಿಂದುಳಿದವರಿಗೆ ಅನ್ಯಾಯ:

“ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಇಂದು ದಲಿತರು ಮತ್ತು ಹಿಂದುಳಿದ ವರ್ಗದ (OBC) ಜನರನ್ನು ಮರೆತಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿ ನಿಗಮಗಳಲ್ಲಿ ಸಾಲ ಪಡೆದ ಬಡವರಿಗೆ ಇಂತಹ ಸೌಲಭ್ಯವೇಕೆ ನೀಡಿಲ್ಲ? ರಾಜ್ಯದಲ್ಲಿ 1.41 ಲಕ್ಷ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಸ್ಟೆಲ್ ಸೌಲಭ್ಯವಿಲ್ಲದೆ ಬೀದಿಗೆ ಬಿದ್ದಿದ್ದಾರೆ. ಅವರ ಬಗ್ಗೆ ಕಾಳಜಿ ವಹಿಸದ ಸರ್ಕಾರ, ಕೇವಲ ತುಷ್ಟೀಕರಣದಲ್ಲಿ ಮಗ್ನವಾಗಿದೆ,” ಎಂದು ವಿಜಯೇಂದ್ರ ಕಿಡಿಕಾರಿದರು

 


Share this with Friends

Related Post