ಬೆಂಗಳೂರು : ಮುಂಬರುವ ಸರಣಿ ಚುನಾವಣೆಗಳ ಹಿನ್ನೆಲೆಯಲ್ಲಿ ಪಕ್ಷವನ್ನು ಸಂಘಟನಾತ್ಮಕವಾಗಿ ಸಜ್ಜುಗೊಳಿಸಲು ಬಿಜೆಪಿ ರಾಜ್ಯ ಘಟಕ ಸಜ್ಜಾಗಿದ್ದು, ಫೆಬ್ರವರಿ 19ರಂದು ನಗರದ ಅರಮನೆ ಮೈದಾನದಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ಆಯೋಜಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬುಧವಾರ ಅರಮನೆ ಮೈದಾನದ ಗೇಟ್ ನಂ.4ರ ಗಾಯತ್ರಿ ಗ್ರ್ಯಾಂಡ್‌ನಲ್ಲಿ ಸಭೆಯ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮದ ರೂಪುರೇಷೆಗಳನ್ನು ಹಂಚಿಕೊಂಡರು.
ಗಜೇಂದ್ರ ಸಿಂಗ್ ಶೇಖಾವತ್ ಉದ್ಘಾಟನೆ:
ಗುರುವಾರ ಬೆಳಿಗ್ಗೆ 9.45ಕ್ಕೆ ಧ್ವಜಾರೋಹಣದೊಂದಿಗೆ ಕಾರ್ಯಕ್ರಮ ಆರಂಭವಾಗಲಿದ್ದು, ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಕಾರ್ಯಕಾರಿಣಿಯನ್ನು ಉದ್ಘಾಟಿಸಲಿದ್ದಾರೆ. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ರಾಜ್ಯದ ಮೂಲೆಮೂಲೆಗಳಿಂದ ಸಂಸದರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಒಳಗೊಂಡಂತೆ ಒಟ್ಟು 1,250ಕ್ಕೂ ಹೆಚ್ಚು ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ಚುನಾವಣಾ ಪರ್ವಕ್ಕೆ ರಣಕಹಳೆ:
“ಮುಂದಿನ ಆರು ತಿಂಗಳು ರಾಜ್ಯದಲ್ಲಿ ಚುನಾವಣಾ ಪರ್ವ ನಡೆಯಲಿದೆ. ಬಾಗಲಕೋಟೆ, ದಾವಣಗೆರೆ ದಕ್ಷಿಣ ಹಾಗೂ ಬಾಗೇಪಲ್ಲಿ ಉಪಚುನಾವಣೆಗಳ ಜೊತೆಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆಗಳು ಎದುರಾಗಲಿವೆ. ಈ ನಿಟ್ಟಿನಲ್ಲಿ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ಕುರಿತು ಗಂಭೀರ ಚರ್ಚೆ ನಡೆಸಲಾಗುವುದು” ಎಂದು ವಿಜಯೇಂದ್ರ ಹೇಳಿದರು.
ಸರ್ಕಾರದ ವಿರುದ್ಧ ಹೋರಾಟದ ನಿರ್ಣಯ:
ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಅಧಿಕಾರಕ್ಕೆ ಬಂದು ಮೂರು ವರ್ಷ ಪೂರೈಸುತ್ತಿರುವ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳಿಂದ ಜನರು ಬೇಸತ್ತಿದ್ದಾರೆ. ಈ ಭ್ರಷ್ಟ, ರೈತ ವಿರೋಧಿ ಹಾಗೂ ಯುವಜನ ವಿರೋಧಿ ಸರ್ಕಾರವನ್ನು ಕಿತ್ತೊಗೆಯುವ ನಿಟ್ಟಿನಲ್ಲಿ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

