ಬೆಂಗಳೂರು: ರಾಜ್ಯ ಸರ್ಕಾರವು ಯಾವುದೇ ಜಾತಿಗೆ ಅನ್ಯಾಯವಾಗದಂತೆ ಎಲ್ಲರನ್ನೂ ಒಳಗೊಂಡ ಸಾಮಾಜಿಕ ನ್ಯಾಯ ಒದಗಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ. ಅಲ್ಲದೆ, ಬಸವಣ್ಣನವರ ತತ್ವದಡಿ ಸಮ ಸಮಾಜ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಸಾಥ್ ನೀಡುವುದಾಗಿ ಹೇಳಿದ್ದಾರೆ
ಒಳಮೀಸಲಾತಿ ಜಾರಿ ಕುರಿತು ಉಂಟಾಗಿರುವ ಗೊಂದಲಗಳಿಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರೊಂದಿಗೆ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಇಂದು ಮಹತ್ವದ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಾಜದ ಯಾವುದೇ ವರ್ಗಕ್ಕೂ ಅನ್ಯಾಯವಾಗದಂತೆ ನ್ಯಾಯಸಮ್ಮತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದರು.
ಬಸವಣ್ಣನವರ ತತ್ವವೇ ನಮಗೆ ದಾರಿ:
“12ನೇ ಶತಮಾನದಲ್ಲೇ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಜಗತ್ತಿಗೆ ಪರಿಚಯಿಸಿದ ವಿಶ್ವಗುರು ಬಸವಣ್ಣನವರ ತತ್ವಾದರ್ಶಗಳೇ ನಮ್ಮ ಸರ್ಕಾರದ ದಾರಿದೀಪ. ಸಮ ಸಮಾಜದ ನಿರ್ಮಾಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಅವರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ” ಎಂದು ಸಚಿವರು ಸ್ಪಷ್ಟಪಡಿಸಿದರು.
ಅಧಿವೇಶನದಲ್ಲಿ ಚರ್ಚೆ:
ಒಳಮೀಸಲಾತಿ ಕುರಿತಾದ ಗೊಂದಲಗಳನ್ನು ಪರಿಹರಿಸಲು ಮುಂದಿನ ಅಧಿವೇಶನದಲ್ಲಿ ಸಮಗ್ರವಾಗಿ ಚರ್ಚಿಸಲಾಗುವುದು. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ ಸಮಾಲೋಚನೆ ನಡೆಸಿ, ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆದು ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಪ್ರತಿಭಟನಾಕಾರರಿಗೆ ತಿಳಿಸಿದರು.
ನ್ಯಾಯಸಮ್ಮತ ನಿರ್ಧಾರ:
ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಯಾವುದೇ ಜಾತಿಗೆ ತಾರತಮ್ಯವಾಗದಂತೆ ಜವಾಬ್ದಾರಿಯುತವಾಗಿ ಒಳಮೀಸಲಾತಿ ಜಾರಿಗೆ ಕ್ರಮ ವಹಿಸಲಾಗುವುದು ಎಂದು ಅವರು ಇದೇ ವೇಳೆ ಆಶ್ವಾಸನೆ ನೀಡಿದರು.

