Fri. Mar 6th, 2026

ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ಶಾಸಕ ಮುನಿರತ್ನ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

Share this with Friends

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರು ಮಂಗಳವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡುವ ಮೂಲಕ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣರಾಗಿದ್ದಾರೆ. ಸದಾಶಿವನಗರದಲ್ಲಿರುವ ಡಿಸಿಎಂ ಅವರ ನಿವಾಸಕ್ಕೆ ತೆರಳಿದ ಶಾಸಕರು, ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಮಹತ್ವದ ಮಾತುಕತೆ ನಡೆಸಿದರು.

ಕಳೆದ ಕೆಲವು ತಿಂಗಳುಗಳಿಂದ ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳ ವಿಚಾರವಾಗಿ ಇಬ್ಬರ ನಡುವೆ ಸಾರ್ವಜನಿಕವಾಗಿ ವಾಗ್ದಾಳಿಗಳು ನಡೆದಿದ್ದವು. ವಿಶೇಷವಾಗಿ ಜೆಪಿ ಪಾರ್ಕ್ ಅನುದಾನದ ವಿಚಾರದಲ್ಲಿ ಉಂಟಾಗಿದ್ದ ಜಟಾಪಟಿಯ ನಂತರ, ಈ ಭೇಟಿಯು ಸೌಹಾರ್ದಯುತವಾಗಿದ್ದದ್ದು ಕಂಡುಬಂತು. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮುನಿರತ್ನ ಅವರನ್ನು ಅತ್ಮೀಯವಾಗಿ ಬರಮಾಡಿಕೊಂಡು ಮಾತುಕತೆಗೆ ಅವಕಾಶ ಮಾಡಿಕೊಟ್ಟರು.

ಕ್ಷೇತ್ರದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ರಸ್ತೆ ಅಭಿವೃದ್ಧಿ, ಒಳಚರಂಡಿ ವ್ಯವಸ್ಥೆ ಮತ್ತು ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಸರ್ಕಾರದಿಂದ ತುರ್ತು ಅನುದಾನ ಬಿಡುಗಡೆ ಮಾಡುವಂತೆ ಮುನಿರತ್ನ ಅವರು ಡಿಸಿಎಂಗೆ ಮನವಿ ಸಲ್ಲಿಸಿದರು. ಕ್ಷೇತ್ರದ ಜನರ ಹಿತದೃಷ್ಟಿಯಿಂದ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮರೆತು ಸರ್ಕಾರಕ್ಕೆ ಸಹಕಾರ ನೀಡಲು ಸಿದ್ಧವಿರುವುದಾಗಿ ಅವರು ಈ ವೇಳೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಮನವಿಯನ್ನು ಸಕಾರಾತ್ಮಕವಾಗಿ ಸ್ವೀಕರಿಸಿದ್ದು, ನಿಯಮಾನುಸಾರ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಈ ಭೇಟಿಯ ಫೋಟೋಗಳು ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ಬದ್ಧ ವೈರಿಗಳ ನಡುವಿನ ಈ ಮೌನ ಮುನಿಸು ಅಂತ್ಯವಾಯಿತೇ ಎಂಬ ಕುತೂಹಲ ಮೂಡಿಸಿದೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಶಾಸಕ ಮುನಿರತ್ನ ಅವರ ನಡುವಿನ ದಿಢೀರ್ ಭೇಟಿ ಬಳಿಕ ಇಬ್ಬರೂ ನಾಯಕರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಭೇಟಿಯ ಉದ್ದೇಶವನ್ನು ಸ್ಪಷ್ಟಪಡಿಸಿದ್ದಾರೆ.

ಶಾಸಕ ಮುನಿರತ್ನ ಅವರು ಮಾತನಾಡಿ, “ಚುನಾವಣೆ ಮುಗಿದ ಮೇಲೆ ನಾವೆಲ್ಲರೂ ಅಭಿವೃದ್ಧಿಯ ದೃಷ್ಟಿಯಿಂದ ಕೆಲಸ ಮಾಡಬೇಕಾಗುತ್ತದೆ. ನನ್ನ ರಾಜರಾಜೇಶ್ವರಿ ನಗರ ಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆಗಳು, ಪಾರ್ಕ್‌ಗಳು ಹಾಗೂ ಒಳಚರಂಡಿ ಕಾಮಗಾರಿಗಳು ಕುಂಠಿತಗೊಂಡಿವೆ. ಈ ಕೆಲಸಗಳಿಗೆ ಅನುದಾನ ಬಿಡುಗಡೆ ಮಾಡುವ ಅಧಿಕಾರ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರ ಬಳಿ ಇದೆ. ಹೀಗಾಗಿ ಕ್ಷೇತ್ರದ ಜನರ ಹಿತದೃಷ್ಟಿಯಿಂದ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ,” ಎಂದು ತಿಳಿಸಿದರು. ಹಳೆಯ ವಾಗ್ದಾಳಿಗಳ ಬಗ್ಗೆ ಕೇಳಿದ ಪ್ರಶ್ನೆಗೆ, “ಅಭಿವೃದ್ಧಿ ವಿಷಯದಲ್ಲಿ ವೈಯಕ್ತಿಕ ಭಿನ್ನಾಭಿಪ್ರಾಯಗಳು ಅಡ್ಡಿ ಬರಬಾರದು” ಎಂದು ಅವರು ಮಾರ್ಮಿಕವಾಗಿ ಉತ್ತರಿಸಿದರು.

ಇನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯಿಸಿ, “ಮುನಿರತ್ನ ಅವರು ತಮ್ಮ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಬಂದಿದ್ದರು. ಒಬ್ಬ ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಕೇಳುವುದು ಅವರ ಹಕ್ಕು. ಬೆಂಗಳೂರಿನ ಸಮಗ್ರ ಏಳಿಗೆ ನಮ್ಮ ಸರ್ಕಾರದ ಗುರಿ. ಇದರಲ್ಲಿ ಯಾವುದೇ ಪಕ್ಷಪಾತವಿಲ್ಲ. ನಿಯಮಾನುಸಾರ ಯಾವ ಕಾಮಗಾರಿಗಳಿಗೆ ಆದ್ಯತೆ ನೀಡಬೇಕೋ ಅವುಗಳನ್ನು ಖಂಡಿತವಾಗಿ ಪರಿಶೀಲಿಸುತ್ತೇವೆ,” ಎಂದರು.

 


Share this with Friends

Related Post