ಬೆಂಗಳೂರು: ಕರ್ನಾಟಕದಲ್ಲಿ ಕೈಗಾರಿಕಾ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಪೂರಕವಾಗಿ ಟಾಟಾ ಅಡ್ವಾನ್ಸ್ ಸಿಸ್ಟಮ್ಸ್ ಅಧ್ಯಕ್ಷ ಬನ್ ಮಾಲಿ ಅಗರವಾಲಾ ಅವರ ನೇತೃತ್ವದ ಉನ್ನತ ಮಟ್ಟದ ನಿಯೋಗವು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿತು.
ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ನಡೆದ ಈ ಸಭೆಯಲ್ಲಿ, ರಾಜ್ಯದಲ್ಲಿ ಟಾಟಾ ಸಮೂಹವು ಕೈಗೊಳ್ಳಲಿರುವ ಹೊಸ ಯೋಜನೆಗಳು ಹಾಗೂ ಹೂಡಿಕೆಯ ಪ್ರಸ್ತಾವನೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಅವರು ಉಪಸ್ಥಿತರಿದ್ದು, ಯೋಜನೆಗಳ ಅನುಷ್ಠಾನಕ್ಕೆ ಅಗತ್ಯವಿರುವ ಕಾನೂನಾತ್ಮಕ ಮತ್ತು ಆಡಳಿತಾತ್ಮಕ ಸಹಕಾರದ ಬಗ್ಗೆ ಮಾಹಿತಿ ಹಂಚಿಕೊಂಡರು.
ಸಾವಿರಾರು ಉದ್ಯೋಗ ಸೃಷ್ಟಿಯ ನಿರೀಕ್ಷೆ:
ಏರೋಸ್ಪೇಸ್ ಮತ್ತು ರಕ್ಷಣಾ ವಲಯದಲ್ಲಿ ಮುಂಚೂಣಿಯಲ್ಲಿರುವ ಟಾಟಾ ಅಡ್ವಾನ್ಸ್ ಸಿಸ್ಟಮ್ಸ್, ರಾಜ್ಯದಲ್ಲಿ ತನ್ನ ಘಟಕಗಳನ್ನು ವಿಸ್ತರಿಸುವ ಮೂಲಕ ಸಾವಿರಾರು ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಗುರಿ ಹೊಂದಿದೆ. ವಿಶೇಷವಾಗಿ ಬೆಂಗಳೂರನ್ನು ಏವಿಯೇಷನ್ ಹಬ್ ಆಗಿ ರೂಪಿಸುವ ನಿಟ್ಟಿನಲ್ಲಿ ಈ ಭೇಟಿ ಹೆಚ್ಚು ಮಹತ್ವ ಪಡೆದುಕೊಂಡಿದೆ.
ರಾಜ್ಯದ ಕೈಗಾರಿಕಾ ನೀತಿಯಡಿ ಸಂಸ್ಥೆಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು.
ಟಾಟಾ ಸಮೂಹದ ಸಂಸ್ಥೆಗಳಾದ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ ಸಿಸ್ಟಮ್ಸ್ ಲಿಮಿಟೆಡ್ (TASL) ಕರ್ನಾಟಕದಲ್ಲಿ ಸುಮಾರು ₹2,300 ಕೋಟಿ ಹೂಡಿಕೆ ಮಾಡಲು ಉದ್ದೇಶಿಸಿವೆ.ಈ ಯೋಜನೆಗಳಿಂದ ರಾಜ್ಯದಲ್ಲಿ ಅಂದಾಜು 1,650 ಜನರಿಗೆ ನೇರ ಉದ್ಯೋಗ ಹಾಗೂ 25,000ಕ್ಕೂ ಹೆಚ್ಚು ಜನರಿಗೆ ಪರೋಕ್ಷ ಉದ್ಯೋಗ ಲಭಿಸುವ ನಿರೀಕ್ಷೆಯಿದೆ ಹಾಗಾಗಿ ಟಾಟಾ ಸಮೂಹದ ಈ ನಡೆಯಿಂದಾಗಿ ರಾಜ್ಯದ ಆರ್ಥಿಕತೆಗೆ ಹೆಚ್ಚಿನ ಬಲ ಸಿಗಲಿದೆ ಎಂದು ವಿಶ್ಲೇಷಿಸಲಾಗಿದೆ.

