ಬೆಂಗಳೂರು, ಮಾ.5: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ ಬರ ಪರಿಸ್ಥಿತಿ ಕುರಿತು ಮಹತ್ವದ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಳೊಂದಿಗೆ ಮಹತ್ವದ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ಯಾವುದೇ ಜಿಲ್ಲೆಗಳಲ್ಲಿ, ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗಕೂಡದು ಎಂದು ತಾಕೀತು ಮಾಡಿದರು.
ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪದೇ ಪದೇ ದೂರುಗಳು ಬರುತ್ತಿವೆ, ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳದೆ ಏನು ಮಾಡುತ್ತಿದೆ ಎಂದು ಜಿಲ್ಲಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ನಮ್ಮ ಸರ್ಕಾರ ಸುಮಾರು 900 ಕೋಟಿ ರೂಪಾಯಿಗಳನ್ನು ಕುಡಿಯುವ ನೀರು ಮತ್ತು ಬರ ನಿರ್ವಹಣೆಗೆ ಬಿಡುಗಡೆ ಮಾಡಿದೆ ಅದನ್ನ ಏಕೆ ಸರಿಯಾಗಿ ಬಳಕೆ ಮಾಡಿಕೊಳ್ಳುತ್ತಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ಉದ್ಯೋಗ ಸೃಷ್ಟಿಗೆ ನರೇಗಾ ಯೋಜನೆಯಡಿ ಲಭ್ಯವಿರುವ ಅನುದಾನಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು. 100 ದಿನಗಳ ಮಾನವ ಉದ್ಯೋಗ ಒದಗಿಸಬೇಕು ಜೊತೆಗೆ ಅದನ್ನು 150 ದಿನಗಳಿಗೆ ಹೆಚ್ಚಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಒಂದು ವೇಳೆ ಒಪ್ಪಿದರೆ 150 ದಿನ ಕೆಲಸ ಮಾಡಿಸಬೇಕು ಎಂದು ಸಿಎಂ ಸಲಹೆ ನೀಡಿದರು.