Mon. Dec 23rd, 2024

ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ : ಸಿಎಂ ಸಿದ್ದರಾಮಯ್ಯ

Siddaramaiaha
Share this with Friends

ಕಾರವಾರ, ಮಾರ್ಚ್​ 6: ಮುಂದಿನ ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರದ ಸಿದ್ಧತೆ ಆರಂಭಿಸಿದೆ. ಎರಡು ದಿನದಲ್ಲಿ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಈ ಬಾರಿ ಅಭ್ಯರ್ಥಿಗಳ ಆಯ್ಕೆ ಅಷ್ಟೊಂದು ಸಮಸ್ಯೆ ಆಗಿಲ್ಲ. ಆದಷ್ಟು ಬೇಗ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು.

ಮಾರ್ಚ್​ 7ರಂದು ಕಾಂಗ್ರೆಸ್​​ ಸಿಇಸಿ ಸಭೆ ನಡೆಯಲಿದ್ದು, ಆ ಬಳಿಕ ಅಭ್ಯರ್ಥಿಗಳ ಪಟ್ಟಿಯ ಮಾಹಿತಿ ದೊರೆಯಲಿದೆ ಎಂದು ಡಿಸಿಎಂ ಸಹ ಈಗಾಗಲೇ ತಿಳಿಸಿದ್ದಾರೆ. ಈ ಮಧ್ಯೆ, ಸಿಎಂ ಕೂಡ ಹೇಳಿಕೆ ನೀಡಿರುವುದರಿಂದ ಕೆಲವೇ ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಹುತೇಕ ಖಚಿತವಾಗಿದೆ.

ಬಿಜೆಪಿಯವರು ಕಾಂಗ್ರೆಸ್ ನಾಯಕರನ್ನು ಸೆಳೆಯಲು ಪ್ರಯತ್ನಿಸಿದಾರೆ ಎಂಬ ಬಿ.ಆರ್ ಪಾಟೀಲ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರು ಯಾವತ್ತೂ ಜನರ ಆಶಿರ್ವಾದಿಂದ ಅಧಿಕಾರಕ್ಕೆ ಬಂದಿಲ್ಲ. ಬಿಜೆಪಿಯವರು ಆಪರೇಷನ್ ಕಮಲ ಮಾಡುವುದರಲ್ಲಿ ನಿಸ್ಸೀಮರು. ಈಗ ಮತ್ತೆ ಅದೆ ಚಾಳಿಯನ್ನು ಮುಂದುವರಿಸುತ್ತಿದ್ದಾರೆ. ಅವರು ದೇಶದ ಅನೇಕ ರಾಜ್ಯಗಳಲ್ಲಿ ಆಪರೇಷನ್ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ ಎಂದರು.

ಇನ್ನು, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಆತಂಕಕ್ಕೆ ಕಾರಣವಾಗಿರುವ ಮಂಗನ ಕಾಯಿಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಕಾಯಿಲೆ ತಡೆಗಟ್ಟಲು ಆದಷ್ಟು ಬೇಗ ಕ್ರಮವಹಿಸುತ್ತೇವೆ. ಕಾಯಿಲೆಯಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಕೊಡಲಾಗುವುದು ಎಂದು ಹೇಳಿದರು.


Share this with Friends

Related Post