ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ವಿಳಂಬವಿಲ್ಲದೆ, ಕೇವಲ 90 ದಿನಗಳ ಕಾಲಮಿತಿಯಲ್ಲಿ ಭರ್ತಿ ಮಾಡಲು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ವಿಧಾನಸಭೆಯ ಕಲಾಪದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಹುದ್ದೆಗಳು ಖಾಲಿಯಾದ ತಕ್ಷಣವೇ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಎಂದು ಈಗಾಗಲೇ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳಿಗೆ ನಿರ್ದೇಶನ ನೀಡಲಾಗಿದೆ,” ಎಂದರು.
ನೇಮಕಾತಿಯಲ್ಲಿ ಪಾರದರ್ಶಕತೆ:
“ನೇಮಕಾತಿ ಪ್ರಕ್ರಿಯೆಯನ್ನು ಸುಗಮಗೊಳಿಸಲು ಆನ್‌ಲೈನ್ ತಂತ್ರಾಂಶವನ್ನು ಬಳಸಲಾಗುತ್ತಿದೆ. ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯು ಆಯ್ಕೆ ಪ್ರಕ್ರಿಯೆಯನ್ನು ನಡೆಸಲಿದ್ದು, ಅರ್ಹ ಅಭ್ಯರ್ಥಿಗಳಿಗೆ ಯಾವುದೇ ತಾರತಮ್ಯವಾಗದಂತೆ ಕ್ರಮ ವಹಿಸಲಾಗಿದೆ,” ಎಂದು ಸಚಿವರು ವಿವರಿಸಿದರು.
ಸ್ಥಳೀಯರಿಗೆ ಮೊದಲ ಆದ್ಯತೆ:
ಅಂಗನವಾಡಿ ಕಾರ್ಯಕರ್ತೆಯರ ಆಯ್ಕೆಯಲ್ಲಿ ಆಯಾ ಗ್ರಾಮದ ಅಥವಾ ವಾರ್ಡ್‌ನ ನಿವಾಸಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಒಂದು ವೇಳೆ ಸ್ಥಳೀಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದರೆ ಮಾತ್ರ ಗ್ರಾಮ ಪಂಚಾಯಿತಿ ಅಥವಾ ಹೋಬಳಿ ಮಟ್ಟದ ನಿವಾಸಿಗಳನ್ನು ಪರಿಗಣಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಉಡುಪಿ ಜಿಲ್ಲೆಯ ಅಪ್‌ಡೇಟ್:
ಉಡುಪಿ ಜಿಲ್ಲೆಯ ಕುರಿತು ಮಾಹಿತಿ ನೀಡಿದ ಸಚಿವರು, ಜಿಲ್ಲೆಯಲ್ಲಿ ಖಾಲಿ ಇರುವ 26 ಕಾರ್ಯಕರ್ತೆ ಮತ್ತು 132 ಸಹಾಯಕಿ ಹುದ್ದೆಗಳ ಪೈಕಿ ಬಹುತೇಕ ಹುದ್ದೆಗಳ ನೇಮಕಾತಿ ಅಂತಿಮ ಹಂತದಲ್ಲಿದೆ. ಈಗಾಗಲೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದರು.

