Sun. Mar 15th, 2026

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಮೂವರು ಆರ್.ಎಸ್.ಐ ಬಲಿ; ಸ್ಥಳಕ್ಕೆ ಗೃಹ ಸಚಿವರ ಭೇಟಿ

Share this with Friends

ಚಳ್ಳಕೆರೆ: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ (CAR) ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು (RSI) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ವಿವರ:

ಮೃತರನ್ನು ಮಂಜುನಾಥ್ ದಾರಿಮನಿ, ಅಮರೀಶ್ ಬರ್ಗಿ ಮತ್ತು ಸಚೀನ್ ಎಂದು ಗುರುತಿಸಲಾಗಿದೆ. ಇವರು ಕರ್ತವ್ಯ ನಿಮಿತ್ತ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಪಿಎಸ್ಐ ಈಶ್ವರ್ ಮತ್ತು ಆರ್‌ಎಸ್‌ಐ ಮಹಾಂತೇಶ್ ಬೊಮ್ಮನ್ನವರ್ ಅವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗೃಹ ಸಚಿವರ ಭೇಟಿ ಮತ್ತು ಸಾಂತ್ವನ:

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಿರಂತರ ಅಭ್ಯಾಸ ಮತ್ತು ಕಠಿಣ ಪರಿಶ್ರಮದಿಂದ ಪೊಲೀಸ್ ಇಲಾಖೆಗೆ ಸೇರಿದ್ದ ಯುವ ಅಧಿಕಾರಿಗಳನ್ನು ಕಳೆದುಕೊಂಡಿರುವುದು ಇಲಾಖೆಗೆ ತುಂಬಲಾರದ ನಷ್ಟ. ಅವರ ಕುಟುಂಬದವರಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಕಂಬನಿ ಮಿಡಿದರು.

ಅಲ್ಲದೆ, ಮೃತರ ಕುಟುಂಬದವರನ್ನು ಭೇಟಿ ಮಾಡಿದ ಸಚಿವರು ವೈಯಕ್ತಿಕವಾಗಿ ಸಾಂತ್ವನ ಹೇಳಿದರು. ಗಾಯಾಳುಗಳಿಗೆ ಅತ್ಯಾಧುನಿಕ ಚಿಕಿತ್ಸೆ ನೀಡುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.

ತನಿಖೆಗೆ ಆದೇಶ:

ಅಪಘಾತದ ತೀವ್ರತೆಯ ಬಗ್ಗೆ ಮಾಹಿತಿ ಪಡೆದ ಸಚಿವರು, ಘಟನೆಗೆ ನಿಖರ ಕಾರಣವೇನು ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮಗಳು ಜರುಗುತ್ತಿವೆ.

 


Share this with Friends

Related Post