Sat. Jun 6th, 2026

ಎಲ್ಪಿಜಿ ಅಭಾವ:ತುಮಕೂರಿನ ಸಿದ್ದಗಂಗಾ ಶ್ರೀಗಳು ಹೇಳಿದ್ದೇನು?

Share this with Friends

ತುಮಕೂರು: ಜಾಗತಿಕ ಮಟ್ಟದಲ್ಲಿ ಎದುರಾಗಬಹುದಾದ ಇಂಧನ ಹಾಗೂ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕು ಮತ್ತು ದೈನಂದಿನ ಜೀವನದಲ್ಲಿ ಸಂಪನ್ಮೂಲಗಳನ್ನು ಮಿತವಾಗಿ ಬಳಸಬೇಕು ಎಂದು ಸಿದ್ದಗಂಗಾ ಮಠದ ಅಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಅವರು ಕರೆ ನೀಡಿದ್ದಾರೆ.

ಭಾನುವಾರ ಮಠದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಪ್ರಸ್ತುತ ಅಂತರಾಷ್ಟ್ರೀಯ ವಿದ್ಯಮಾನಗಳು ಸಾಮಾನ್ಯ ಜನರ ಜೀವನದ ಮೇಲೆ ಬೀರಬಹುದಾದ ಪರಿಣಾಮಗಳ ಕುರಿತು ಕಳವಳ ವ್ಯಕ್ತಪಡಿಸಿದರು.ವಿಶ್ವದ ಕೆಲವು ರಾಷ್ಟ್ರಗಳ ನಡುವೆ ಯುದ್ಧದ ಭೀತಿ ಎದುರಾಗಿರುವುದರಿಂದ ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಅಡುಗೆ ಅನಿಲದ (LPG) ಬೆಲೆ ಏರಿಕೆಯಾಗುವ ಅಥವಾ ಅಭಾವ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಈಗಿನಿಂದಲೇ ಮಿತವ್ಯಯದ ಹಾದಿ ಹಿಡಿಯುವುದು ಒಳಿತು ಎಂದು ಶ್ರೀಗಳು ತಿಳಿಸಿದರು. “ಮನೆಯಲ್ಲಿ ಗ್ಯಾಸ್ ಬಳಸುವ ಮುನ್ನ ಜನರು ಹತ್ತು ಬಾರಿ ಯೋಚಿಸಬೇಕು. ಅನಗತ್ಯವಾಗಿ ಇಂಧನ ವ್ಯರ್ಥ ಮಾಡದೆ, ಪರ್ಯಾಯ ಇಂಧನ ಮೂಲಗಳತ್ತ ಗಮನ ಹರಿಸುವುದು ಇಂದಿನ ಅಗತ್ಯವಾಗಿದೆ” ಎಂದು ಅವರು ಅಭಿಪ್ರಾಯಪಟ್ಟರು.

ರಾಷ್ಟ್ರಪತಿಗಳ ಆಗಮನ ಮತ್ತು ಸಿದ್ಧತೆ:

ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 119ನೇ ಜನ್ಮ ಜಯಂತಿ ಹಾಗೂ ಗುರುವಂದನಾ ಮಹೋತ್ಸವದ ಅಂಗವಾಗಿ ಏಪ್ರಿಲ್ 1 ರಂದು ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಮಠಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಐತಿಹಾಸಿಕ ಭೇಟಿಯ ಹಿನ್ನೆಲೆಯಲ್ಲಿ ಮಠದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಅಂದು ಬೆಳಿಗ್ಗೆ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಭಕ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಶ್ರೀಗಳು ಮಾಹಿತಿ ನೀಡಿದರು.

ಬಿಗಿ ಭದ್ರತೆ ಮತ್ತು ಕಾರ್ಯಕ್ರಮದ ರೂಪುರೇಷೆ:

ರಾಷ್ಟ್ರಪತಿಗಳ ಭೇಟಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಸಹಯೋಗದೊಂದಿಗೆ ಬಿಗಿ ಭದ್ರತಾ ವ್ಯವಸ್ಥೆ ಹಾಗೂ ಕಾರ್ಯಕ್ರಮದ ರೂಪುರೇಷೆಗಳನ್ನು ಅಂತಿಮಗೊಳಿಸಲಾಗಿದೆ. ಮಠದ ಆವರಣದಲ್ಲಿ ಸ್ವಚ್ಛತೆ ಮತ್ತು ಭಕ್ತರಿಗೆ ಅಗತ್ಯ ಸೌಲಭ್ಯಗಳ ಬಗ್ಗೆ ವಿಶೇಷ ಗಮನ ಹರಿಸಲಾಗಿದೆ. ಈ ಮಹತ್ವದ ಕಾರ್ಯಕ್ರಮದಲ್ಲಿ ರಾಜ್ಯದ ಗಣ್ಯಾತಿಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಶ್ರೀಗಳು ತಿಳಿಸಿದರು.

ಭಾರತರತ್ನ ವಿಚಾರವಾಗಿ ಶ್ರೀಗಳ ಸ್ಪಷ್ಟನೆ:

ಇದೇ ಸಂದರ್ಭದಲ್ಲಿ ಸಿದ್ದಗಂಗಾ ಮಠದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ‘ಭಾರತರತ್ನ’ ಪ್ರಶಸ್ತಿ ನೀಡುವ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶ್ರೀಗಳು, “ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಯವರು ಪ್ರಶಸ್ತಿಗಳಿಗಿಂತ ಮಿಗಿಲಾದವರು. ಅವರಿಗೆ ಭಾರತರತ್ನ ನೀಡಬೇಕು ಎನ್ನುವುದು ಕೋಟ್ಯಂತರ ಭಕ್ತರ ಆಸೆಯಾಗಿದೆ. ಭಕ್ತರ ಈ ಭಾವನೆಯನ್ನು ನಾವು ಗೌರವಿಸುತ್ತೇವೆ. ಆದರೆ ಪ್ರಶಸ್ತಿ ಘೋಷಣೆ ಮಾಡುವುದು ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬಿಟ್ಟ ವಿಚಾರ” ಎಂದು ತಿಳಿಸಿದರು.

 


Share this with Friends

Related Post