ಬಾಗಲಕೋಟೆ: “ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳ ಕಾಲ ನಮ್ಮದೇ ಸರ್ಕಾರ ಅಧಿಕಾರದಲ್ಲಿರಲಿದ್ದು, ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದೇನೆ. ಬಾಗಲಕೋಟೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರನ್ನು ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸಿಕೊಡಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತದಾರರಲ್ಲಿ ಮನವಿ ಮಾಡಿದರು.
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ಐಹೊಳೆ ಮತ್ತು ಅಮೀನಗಡ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ:
ಪ್ರಧಾನಿ ಮೋದಿಯವರ 12 ವರ್ಷಗಳ ಆಡಳಿತವನ್ನು ಟೀಕಿಸಿದ ಸಿಎಂ, “ಅಚ್ಚೆ ದಿನ್, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ., ವರ್ಷಕ್ಕೆ 2 ಕೋಟಿ ಉದ್ಯೋಗ ಹಾಗೂ ರೈತರ ಆದಾಯ ದುಪ್ಪಟ್ಟು ಮಾಡುವ ಭರವಸೆಗಳು ಎಲ್ಲಿ ಹೋದವು? ದೇಶದ ಸಾಲವನ್ನು 50 ಲಕ್ಷ ಕೋಟಿಯಿಂದ 218 ಲಕ್ಷ ಕೋಟಿಗೆ ಏರಿಸಿದ್ದೇ ಬಿಜೆಪಿ ಸರ್ಕಾರದ ಸಾಧನೆ. ಇಷ್ಟೆಲ್ಲಾ ವೈಫಲ್ಯಗಳ ನಡುವೆಯೂ ಯಾವ ಮುಖ ಹೊತ್ತು ಬಿಜೆಪಿ ನಾಯಕರು ಮತ ಕೇಳುತ್ತಿದ್ದಾರೆ?” ಎಂದು ಪ್ರಶ್ನಿಸಿದರು.
ನೀರಾವರಿ ಮತ್ತು ಪರಿಹಾರದ ಭರವಸೆ:
ಕೃಷ್ಣ ಮೇಲ್ದಂಡೆ ಯೋಜನೆ ಮತ್ತು ಆಲಮಟ್ಟಿ ವಿಚಾರದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಜನವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದ ಅವರು, “ನಮ್ಮ ಸರ್ಕಾರ ನೀರಾವರಿ ಜಮೀನಿಗೆ ಪ್ರತಿ ಎಕರೆಗೆ 40 ಲಕ್ಷ ರೂ. ಹಾಗೂ ಒಣ ಭೂಮಿಗೆ 30 ಲಕ್ಷ ರೂ. ಪರಿಹಾರ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಂದಿನ ಮೂರು ವರ್ಷಗಳಲ್ಲಿ ಸಂತ್ರಸ್ತರಿಗೆ ಸಂಪೂರ್ಣ ಪರಿಹಾರ ಒದಗಿಸಲಾಗುವುದು” ಎಂದು ಭರವಸೆ ನೀಡಿದರು.
ಕ್ಷೇತ್ರದ ಅಭಿವೃದ್ಧಿಗೆ ಒತ್ತು:
ಎಚ್.ವೈ. ಮೇಟಿಯವರ ಶ್ರಮದಿಂದ ಬಾಗಲಕೋಟೆಗೆ ಮೆಡಿಕಲ್ ಕಾಲೇಜು ಮಂಜೂರಾಗಿದೆ. ಮುಂಬರುವ ದಿನಗಳಲ್ಲಿ ಕ್ಷೇತ್ರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್ ಸ್ಥಾಪನೆ ಹಾಗೂ ಐಹೊಳೆಯನ್ನು ಅಂತರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಅಹಿಂದ ವರ್ಗಗಳ ಏಳಿಗೆ ಮತ್ತು ಕ್ಷೇತ್ರದ ಪ್ರಗತಿಗಾಗಿ ಕಾಂಗ್ರೆಸ್ ಬೆಂಬಲಿಸುವಂತೆ ಅವರು ಕರೆ ನೀಡಿದರು.

