Sat. Jun 6th, 2026

ಹಾವೇರಿ ವಿವಿ ಗೌರವ ಡಾಕ್ಟರೇಟ್ ನಿರಾಕರಿಸಿದ ಬಸವರಾಜ ಬೊಮ್ಮಾಯಿ

Basavaraj Bommai
Share this with Friends

ಹಾವೇರಿ: ಹಾವೇರಿ ವಿಶ್ವವಿದ್ಯಾಲಯವು ತಮಗೆ ನೀಡಲು ನಿರ್ಧರಿಸಿದ್ದ ‘ಗೌರವ ಡಾಕ್ಟರೇಟ್’ ಪದವಿಯನ್ನು ಸ್ವೀಕರಿಸಲು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ವಿನಮ್ರವಾಗಿ ನಿರಾಕರಿಸಿದ್ದಾರೆ.

ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ಬೊಮ್ಮಾಯಿ ಅವರಿಗೆ ಈ ಗೌರವ ನೀಡಲು ತೀರ್ಮಾನಿಸಲಾಗಿತ್ತು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, “ವಿಶ್ವವಿದ್ಯಾಲಯದ ಈ ನಿರ್ಧಾರಕ್ಕೆ ನಾನು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಆದರೆ, ಸಾರ್ವಜನಿಕ ಸೇವೆಯಲ್ಲಿರುವ ನಾನು ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ. ಜನರ ಪ್ರೀತಿ ಮತ್ತು ವಿಶ್ವಾಸವೇ ನನಗೆ ದೊರೆತ ಅತಿದೊಡ್ಡ ಗೌರವ,” ಎಂದು ತಿಳಿಸಿದ್ದಾರೆ.

ಸಾಧಕರಿಗೆ ಸಿಗಲಿ ಗೌರವ:

“ಗೌರವ ಡಾಕ್ಟರೇಟ್ ಎನ್ನುವುದು ಯಾವುದಾದರೂ ನಿರ್ದಿಷ್ಟ ಕ್ಷೇತ್ರದಲ್ಲಿ ಸುದೀರ್ಘ ಕಾಲ ಮಹತ್ತರ ಸೇವೆ ಸಲ್ಲಿಸಿದ ಸಾಧಕರಿಗೆ ಸಲ್ಲಬೇಕಾದ ಗೌರವ. ಸಮಾಜ ಸೇವೆಯಲ್ಲಿ ತೊಡಗಿರುವವರಿಗೆ ಅಥವಾ ರಾಜಕಾರಣಿಗಳಿಗೆ ಇಂತಹ ಪ್ರಶಸ್ತಿಗಳನ್ನು ನೀಡುವುದು ಸಮಂಜಸವಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಆದ್ದರಿಂದ ಈ ಪದವಿಯನ್ನು ನೈಜ ಸಾಧಕರಿಗೆ ನೀಡಬೇಕು,” ಎಂದು ಅವರು ವಿಶ್ವವಿದ್ಯಾಲಯಕ್ಕೆ ಮನವಿ ಮಾಡಿದ್ದಾರೆ.

ತಮ್ಮ ನಿರ್ಧಾರವನ್ನು ಈಗಾಗಲೇ ಕುಲಪತಿಗಳಿಗೆ ತಿಳಿಸಿರುವುದಾಗಿ ಹೇಳಿರುವ ಬೊಮ್ಮಾಯಿ ಅವರು, ಹಾವೇರಿ ವಿಶ್ವವಿದ್ಯಾಲಯದ ಕುಲಪತಿಗಳು, ಸಿಂಡಿಕೇಟ್ ಸದಸ್ಯರು ಹಾಗೂ ಆಡಳಿತ ಮಂಡಳಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಗೌರವ ಡಾಕ್ಟರೇಟ್ ಕುರಿತು ತನ್ನ ಸ್ಪಷ್ಟ ನಿರ್ಧಾರ ಪ್ರಕಟಿಸಿರುವ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಸಚಿವ ಸುರೇಶ್ ಕುಮಾರ್ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. ಇದರಿಂದ ನಿಮ್ಮ ಕುರಿತು ಸಮಾಜದ ಗೌರವ ಇಮ್ಮಡಿಯಾಗಿದೆ ಎಂದು ತಿಳಿಸಿದ್ದಾರೆ.

 


Share this with Friends

Related Post