ಬಾಗಲಕೋಟೆ: ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೊಳಿಸುವುದಿಲ್ಲ ಎಂದು ಸರ್ಕಾರ ಎಲ್ಲಿಯೂ ಹೇಳಿಲ್ಲ. ಈ ವಿಷಯದಲ್ಲಿ ನಮ್ಮ ಸರ್ಕಾರ ಸ್ಪಷ್ಟ ನಿಲುವನ್ನು ಹೊಂದಿದ್ದು, ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ಇದನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಬಾಗಲಕೋಟೆ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಪ್ರಚಾರ ನಡೆಸಲು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ್ದ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಬಿಜೆಪಿ ವಿರುದ್ಧ ಕಿಡಿ:
“ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಒಳ ಮೀಸಲಾತಿ ಜಾರಿ ಮಾಡಲು ಮನಸ್ಸು ಮಾಡಲಿಲ್ಲ. ಸದಾಶಿವ ಆಯೋಗದ ವರದಿಯನ್ನು ತಿರಸ್ಕರಿಸಿದ ಅವರು, ತಮಗೆ ಬೇಕಾದ ರೀತಿಯಲ್ಲಿ ಅಸಮರ್ಪಕ ಅಂಕಿ-ಅಂಶಗಳೊಂದಿಗೆ ಕೇಂದ್ರಕ್ಕೆ ಶಿಫಾರಸು ಕಳುಹಿಸಿದ್ದರು. ಅದು ಊರ್ಜಿತವಾಗದ ರೀತಿಯಲ್ಲಿತ್ತು. ಬಿಜೆಪಿಯದ್ದು ಕೇವಲ ರಾಜಕೀಯ ಗಿಮಿಕ್ ಅಷ್ಟೇ” ಎಂದು ಟೀಕಿಸಿದರು.
ನಾಗಮೋಹನ್ ದಾಸ್ ವರದಿ ಪರಿಶೀಲನೆ:
ಕೋರ್ಟ್ ಆದೇಶದ ಅನ್ವಯವೇ ಒಳ ಮೀಸಲಾತಿ ಜಾರಿ ಮಾಡುವುದಾಗಿ ನಮ್ಮ ಸರ್ಕಾರ ಈಗಾಗಲೇ ಭರವಸೆ ನೀಡಿದೆ. ಈ ನಿಟ್ಟಿನಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಆಯೋಗದ ವರದಿಯೂ ಕೈಸೇರಿದೆ. ಸಚಿವ ಸಂಪುಟದಲ್ಲಿ ಈ ಬಗ್ಗೆ ಒಮ್ಮತದ ನಿರ್ಧಾರವಿದೆ ಎಂದು ಅವರು ಸ್ಪಷ್ಟಪಡಿಸಿದರು.
ಚುನಾವಣೆ ನಂತರ ತೀರ್ಮಾನ:
ಪ್ರಸ್ತುತ ಉಪ ಚುನಾವಣೆ ನಡೆಯುತ್ತಿರುವುದರಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಕಾರಣದಿಂದಾಗಿ ಮುಖ್ಯಮಂತ್ರಿಯವರು ಈ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ. ಚುನಾವಣೆ ಮುಗಿಯುತ್ತಿದ್ದಂತೆ ಎಲ್ಲ ಸಮುದಾಯಗಳ ಹಿತರಕ್ಷಣೆ ಕಾಪಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

