ಬೆಂಗಳೂರು: ಕೊಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ತಡಿಯಂಡಮೋಲ್ ಬೆಟ್ಟಕ್ಕೆ ಚಾರಣಕ್ಕೆ (Trekking) ತೆರಳಿದ್ದ ಯುವತಿ ನಾಪತ್ತೆಯಾಗಿ ನಂತರ ಪತ್ತೆಯಾದ ಪ್ರಕರಣವನ್ನು ಅರಣ್ಯ ಇಲಾಖೆ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.
ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು, ಅರಣ್ಯ ಇಲಾಖೆಯ ಅಧಿಕೃತ ಅನುಮತಿ ಪಡೆಯದೆ ನಿರ್ಬಂಧಿತ ಪ್ರದೇಶಗಳಿಗೆ ನುಗ್ಗುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಇಂತಹ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಯುವತಿ ಮತ್ತು ಆಕೆಯ ತಂಡ ಅರಣ್ಯ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ, ಯಾವುದೇ ಮುನ್ಸೂಚನೆ ಅಥವಾ ಪರವಾನಗಿ ಪಡೆಯದೆ ಚಾರಣ ಕೈಗೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ವನ್ಯಜೀವಿಗಳ ಹಾವಳಿ ಹೆಚ್ಚಾಗಿರುವ ಇಂತಹ ಸೂಕ್ಷ್ಮ ಪ್ರದೇಶಗಳಲ್ಲಿ ಇಂತಹ ಬೇಜವಾಬ್ದಾರಿ ವರ್ತನೆಗಳು ಪ್ರಾಣಾಪಾಯಕ್ಕೆ ಕಾರಣವಾಗಬಹುದು ಎಂದು ಸಚಿವರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಘಟನೆಯು ಕೇವಲ ದಾರಿ ತಪ್ಪಿದ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವಾಗಿ ನಡೆದ ‘ನಾಟಕವೋ’ ಎಂಬ ಬಗ್ಗೆಯೂ ಇಲಾಖೆಯು ಆಂತರಿಕ ತನಿಖೆ ನಡೆಸುತ್ತಿದೆ ಎಂದಿದ್ದಾರೆ.
ಇನ್ನು ಈ ಘಟನೆ ನಡೆದ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಅರಣ್ಯ ಸಿಬ್ಬಂದಿಯ ನಿರ್ಲಕ್ಷ್ಯವಿದೆಯೇ ಎಂಬ ಬಗ್ಗೆಯೂ ತನಿಖೆಗೆ ಆದೇಶಿಸಲಾಗಿದೆ. ಒಂದು ವೇಳೆ ಅತಿಕ್ರಮ ಪ್ರವೇಶಕ್ಕೆ ಸಿಬ್ಬಂದಿ ಪರೋಕ್ಷವಾಗಿ ಸಹಕರಿಸಿರುವುದು ಸಾಬೀತಾದಲ್ಲಿ ಅವರ ವಿರುದ್ಧವೂ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಅರಣ್ಯ ಕಾಯ್ದೆಯಡಿ ಅತಿಕ್ರಮ ಪ್ರವೇಶ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಲು ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಇಲಾಖೆಯ ಪೋರ್ಟಲ್ ಮೂಲಕ ನೋಂದಾಯಿಸಿಕೊಂಡು ಮಾತ್ರ ಚಾರಣ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ

