ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಹಿಳಾ ಮೀಸಲಾತಿಯನ್ನು “ರಾಜಕೀಯ ಗಿಮಿಕ್” ಎಂದು ಕರೆದಿರುವುದು ದೇಶದ ನಾರಿಶಕ್ತಿಗೆ ಮಾಡಿದ ಘೋರ ಅಪಮಾನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದ ಐತಿಹಾಸಿಕ ಮಹಿಳಾ ಮೀಸಲಾತಿಯನ್ನು ಕೇವಲ ಗಿಮಿಕ್ ಎನ್ನುವ ಮೂಲಕ ಕಾಂಗ್ರೆಸ್ ತನ್ನ ಮಹಿಳಾ ವಿರೋಧಿ ಧೋರಣೆಯನ್ನು ಪ್ರದರ್ಶಿಸಿದೆ. ಇದು ಕೇವಲ ರಾಜಕೀಯವಲ್ಲ, ದೇಶದ ಕೋಟ್ಯಂತರ ಮಹಿಳೆಯರ ಸಬಲೀಕರಣಕ್ಕೆ ಮಾಡಿದ ಅಪಮಾನ ಎಂದು ಅವರು ಟೀಕಿಸಿದರು.
ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪಚುನಾವಣೆಯ ಕುರಿತು ಮಾತನಾಡಿದ ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಳಿತವನ್ನು ಮರೆತು ಬಾಗಲಕೋಟೆಯಲ್ಲಿ ಬೀಡುಬಿಟ್ಟಿರುವುದು ಅವರ ಹತಾಶೆಯನ್ನು ತೋರಿಸುತ್ತದೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್ ಪಕ್ಷಕ್ಕೆ ಈ ಚುನಾವಣೆಯಲ್ಲಿ ಸೋಲಿನ ಮುನ್ಸೂಚನೆ ಲಭಿಸಿರುವುದರಿಂದಲೇ ಮುಖ್ಯಮಂತ್ರಿಗಳು ತಮ್ಮ ಪಟಾಲಂ ಜೊತೆ ಸೂಟ್‌ಕೇಸ್ ಹಿಡಿದು ಕ್ಷೇತ್ರದಲ್ಲೇ ಉಳಿದುಕೊಂಡಿದ್ದಾರೆ. ದಾವಣಗೆರೆ ಬಗ್ಗೆ ತಲೆಕೆಡಿಸಿಕೊಳ್ಳದ ಸಿಎಂ, ಬಾಗಲಕೋಟೆಯಲ್ಲಿ ಹತಾಶರಾಗಿ ಓಡಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಇದೇ ವೇಳೆ ಕಾಂಗ್ರೆಸ್ ಪಕ್ಷದ ಆಂತರಿಕ ಬಿಕ್ಕಟ್ಟಿನ ಬಗ್ಗೆ ಪ್ರಸ್ತಾಪಿಸಿದ ಅವರು, ಚುನಾವಣಾ ಫಲಿತಾಂಶದ ನಂತರ ಆಡಳಿತ ಪಕ್ಷದಲ್ಲಿ ದೊಡ್ಡ ಮಟ್ಟದ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಲಿದೆ ಎಂದು ಭವಿಷ್ಯ ನುಡಿದರು. ಈಗಾಗಲೇ ಸಚಿವ ಸಂಪುಟ ವಿಸ್ತರಣೆಗೆ ಆಗ್ರಹಿಸಿ 38ಕ್ಕೂ ಹೆಚ್ಚು ಶಾಸಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಬೆಂಬಲಿಗರು ಸಹ ದೆಹಲಿ ಯಾತ್ರೆ ಆರಂಭಿಸಿರುವುದು ಪಕ್ಷದೊಳಗಿನ ಅಸಮಾಧಾನಕ್ಕೆ ಸಾಕ್ಷಿಯಾಗಿದೆ. ಫಲಿತಾಂಶದ ನಂತರ ಈ ಬಂಡಾಯ ಮತ್ತಷ್ಟು ತಾರಕಕ್ಕೇರಲಿದ್ದು, ಕಾಂಗ್ರೆಸ್ ನಾಯಕರಿಗೆ ಆಗ ಜ್ಞಾನೋದಯವಾಗಲಿದೆ ಎಂದರು.
ರಾಜ್ಯದ ಜನತೆ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿಶೂನ್ಯತೆ ಮತ್ತು ಓಲೈಕೆ ರಾಜಕಾರಣಕ್ಕೆ ಈ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಬಾಗಲಕೋಟೆ ಮತ್ತು ದಾವಣಗೆರೆ ಎರಡೂ ಕ್ಷೇತ್ರಗಳನ್ನು ಕಾಂಗ್ರೆಸ್‌ನಿಂದ ಕಿತ್ತುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಲಿದೆ. ಎರಡೂ ಕಡೆ ಬಿಜೆಪಿ ಅಭ್ಯರ್ಥಿಗಳು ಭಾರಿ ಅಂತರದಿಂದ ಗೆಲ್ಲುವ ಸಂಪೂರ್ಣ ವಿಶ್ವಾಸ ನಮಗಿದೆ ಎಂದು ಅವರು ಪುನರುಚ್ಚರಿಸಿದರು.

