Sat. Jun 6th, 2026

ಉದ್ಯೋಗಾಕಾಂಕ್ಷಿಗಳ ಹೋರಾಟ ಹತ್ತಿಕ್ಕುವ ಸರ್ಕಾರದ ಕ್ರಮಕ್ಕೆ ಅರವಿಂದ ಬೆಲ್ಲದ ಆಕ್ರೋಶ

Share this with Friends

ಹುಬ್ಬಳ್ಳಿ:ರಾಜ್ಯದ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಮುಂದಾದ ಉದ್ಯೋಗಾಕಾಂಕ್ಷಿಗಳನ್ನು ಪೊಲೀಸರ ಮೂಲಕ ಬಂಧಿಸಿ, ಹೋರಾಟ ಹತ್ತಿಕ್ಕುತ್ತಿರುವ ಸರ್ಕಾರದ ಕ್ರಮವನ್ನು ವಿಧಾನಸಭೆ ವಿಪಕ್ಷ ನಾಯಕ ಅರವಿಂದ ಬೆಲ್ಲದ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ನೇಮಕಾತಿ ಪ್ರಕ್ರಿಯೆ ಚುರುಕುಗೊಳಿಸುವಂತೆ ಆಗ್ರಹಿಸಿ ಶಾಂತಿಯುತ ಧರಣಿ ನಡೆಸಲು ಮುಂದಾದ ಅಭ್ಯರ್ಥಿಗಳಿಗೆ 1 ಲಕ್ಷ ರೂಪಾಯಿ ಬಾಂಡ್ ಹಾಗೂ ಒಂದು ವರ್ಷದವರೆಗೆ ಯಾವುದೇ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಷರತ್ತು ವಿಧಿಸಿ ನೋಟಿಸ್ ನೀಡುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ನೀತಿಯಾಗಿದೆ. ಕೂಡಲೇ ಈ ನೋಟಿಸ್‌ಗಳನ್ನು ಹಿಂಪಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಸರ್ಕಾರದ ಭರವಸೆ ಹುಸಿ:

ಧಾರವಾಡದಲ್ಲಿ ನಡೆದ ಬೃಹತ್ ಪ್ರತಿಭಟನೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಒಂದು ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುವ ಭರವಸೆ ನೀಡಿದ್ದರು. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರದ ಈ ವಿಳಂಬ ಧೋರಣೆಯನ್ನು ಪ್ರಶ್ನಿಸಲು ಮುಂದಾದ ವಿದ್ಯಾರ್ಥಿಗಳ ಮೇಲೆ ಕಾನೂನು ಕ್ರಮದ ಬೆದರಿಕೆ ಹಾಕುತ್ತಿರುವುದು ಸರ್ಕಾರದ ಆಡಳಿತ ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಅವರು ಟೀಕಿಸಿದ್ದಾರೆ.

ಹೋರಾಟದ ಎಚ್ಚರಿಕೆ:

“ಪ್ರತಿಭಟನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಸಾಂವಿಧಾನಿಕ ಹಕ್ಕು. ತನ್ನ ತಪ್ಪನ್ನು ತಿದ್ದಿಕೊಳ್ಳುವ ಬದಲು ಹೋರಾಟಗಾರರನ್ನೇ ಹತ್ತಿಕ್ಕಲು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಉದ್ಯೋಗಾಕಾಂಕ್ಷಿಗಳ ಮೇಲಿನ ಪ್ರಕರಣಗಳನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕಾನೂನಾತ್ಮಕ ಹೋರಾಟದ ಜೊತೆಗೆ, ಸರ್ಕಾರದ ಈ ಧೋರಣೆಯನ್ನು ಸಾರ್ವಜನಿಕವಾಗಿ ಜನರ ಮುಂದೆ ಬಯಲು ಮಾಡಲಾಗುವುದು” ಎಂದು ಬೆಲ್ಲದ ಎಚ್ಚರಿಸಿದ್ದಾರೆ.

 


Share this with Friends

Related Post