Sat. Jun 6th, 2026

ಹೊಸ ಜನಗಣತಿಯ ನಂತರವೇ ಕ್ಷೇತ್ರ ಮರುವಿಂಗಡಣೆ ಸೂಕ್ತ: ಸಿಎಂ ಸಿದ್ದರಾಮಯ್ಯ

Share this with Friends

ಮೈಸೂರು: ಸಂಸತ್ ಹಾಗೂ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿ ಜಾರಿ ಮತ್ತು ಕ್ಷೇತ್ರ ಮರುವಿಂಗಡಣೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ಹೊಸ ಜನಗಣತಿಯ ಪ್ರಕ್ರಿಯೆ ಪೂರ್ಣಗೊಂಡ ನಂತರವಷ್ಟೇ ಕ್ಷೇತ್ರಗಳ ಮರುವಿಂಗಡಣೆ ಮಾಡುವುದು ನ್ಯಾಯಸಮ್ಮತ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಎರಡು ದಿನಗಳ ಪ್ರವಾಸಕ್ಕಾಗಿ ಮೈಸೂರಿಗೆ ಆಗಮಿಸಿದ ಅವರು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಕೇಂದ್ರ ಸರ್ಕಾರದ ನಿಲುವುಗಳನ್ನು ವಿಮರ್ಶಿಸಿದರು.

ದಕ್ಷಿಣ ಭಾರತಕ್ಕೆ ಅನ್ಯಾಯದ ಭೀತಿ:

ಲೋಕಸಭಾ ಸ್ಥಾನಗಳನ್ನು ಶೇ. 50 ರಷ್ಟು ಹೆಚ್ಚಿಸುವ ಪ್ರಸ್ತಾವನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ ಸಿಎಂ, “ಜನಗಣತಿ ಆಧಾರಿತ ಮರುವಿಂಗಡಣೆಯು ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ಎಲ್ಲರಿಗೂ ಸಮಾನವಾಗಿ ಸ್ಥಾನಗಳು ಹಂಚಿಕೆಯಾಗಬೇಕು,” ಎಂದರು.

ಕಾಂಗ್ರೆಸ್ ಮಹಿಳಾ ಮೀಸಲಾತಿಯ ಪರ:

“ಕಾಂಗ್ರೆಸ್ ಪಕ್ಷವು ಯಾವಾಗಲೂ ಮಹಿಳಾ ಮೀಸಲಾತಿಯನ್ನು ಬೆಂಬಲಿಸುತ್ತಾ ಬಂದಿದೆ. ಸಂವಿಧಾನದ 73 ಮತ್ತು 74ನೇ ತಿದ್ದುಪಡಿಗಳ ಮೂಲಕ ಸ್ಥಳೀಯ ಸಂಸ್ಥೆಗಳಲ್ಲಿ ಶೇ. 50ರಷ್ಟು ಮೀಸಲಾತಿ ನೀಡಿದ್ದೇ ಕಾಂಗ್ರೆಸ್. 2023ರಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾದಾಗಲೇ ಅದನ್ನು ಜಾರಿಗೊಳಿಸಬಹುದಿತ್ತು. ಇಷ್ಟು ವರ್ಷ ಕಾಯುವ ಅಗತ್ಯವಿರಲಿಲ್ಲ,” ಎಂದು ಪ್ರಶ್ನಿಸಿದರು.

ಪ್ರಧಾನಿ ಮೋದಿಗೆ ತಿರುಗೇಟು:

ಇತ್ತೀಚೆಗೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಸಂದರ್ಭವನ್ನು ಸ್ಮರಿಸಿದ ಅವರು, “ಮೀಸಲಾತಿ ಬಗ್ಗೆ ನನ್ನ ನಿಲುವನ್ನು ಪ್ರಧಾನಿಗಳು ಕೇಳಿದ್ದರು. ನಾವು ಮಹಿಳಾ ಮೀಸಲಾತಿಯ ಪರವಾಗಿದ್ದೇವೆ ಎಂದು ಅವರಿಗೆ ಸ್ಪಷ್ಟವಾಗಿ ತಿಳಿಸಿದ್ದೇನೆ,” ಎಂದರು. ಇದೇ ವೇಳೆ, ಕಾಂಗ್ರೆಸ್ ಮಹಿಳಾ ವಿರೋಧಿ ಎಂಬ ಪ್ರಧಾನಿಗಳ ಆರೋಪವನ್ನು ತಳ್ಳಿಹಾಕಿದ ಸಿಎಂ, “ಪ್ರಧಾನಿಗಳು ಸಾಮಾಜಿಕ ನ್ಯಾಯದ ಪರವಾಗಿಲ್ಲ. ಅಧಿಕಾರಕ್ಕೆ ಬಂದು ಹತ್ತು ವರ್ಷಗಳಾದರೂ ಮಹಿಳಾ ಮೀಸಲಾತಿ ಏಕೆ ಜಾರಿಗೆ ತರಲಿಲ್ಲ?” ಎಂದು ಕಿಡಿಕಾರಿದರು.

ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ:

ಹಿಂದೆ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಪ್ರಧಾನಿ ಮೋದಿಯವರು, ಈಗ ತಮ್ಮ ಪ್ರಣಾಳಿಕೆಯಲ್ಲಿ ಅದೇ ರೀತಿಯ ಯೋಜನೆಗಳನ್ನು ಘೋಷಿಸುತ್ತಿರುವುದು ವಿಪರ್ಯಾಸ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು.

ಜನಸಂಖ್ಯೆ ನಿಯಂತ್ರಿಸಿದ ದಕ್ಷಿಣದ ರಾಜ್ಯಗಳಿಗೆ ಶಿಕ್ಷೆ ನೀಡಬೇಡಿ: 

“ದಕ್ಷಿಣ ಭಾರತದ ರಾಜ್ಯಗಳು ಜನಸಂಖ್ಯೆಯನ್ನು ಯಶಸ್ವಿಯಾಗಿ ನಿಯಂತ್ರಿಸಿವೆ. ಇದನ್ನೇ ಮಾನದಂಡವಾಗಿಟ್ಟುಕೊಂಡು ಕ್ಷೇತ್ರ ಮರುವಿಂಗಡಣೆ ಮಾಡಿದರೆ, ಜನಸಂಖ್ಯೆ ಹೆಚ್ಚಿರುವ ಉತ್ತರ ಭಾರತದ ರಾಜ್ಯಗಳಿಗೆ ಲಾಭವಾಗಿ, ನಮಗೆ ದೊಡ್ಡ ಅನ್ಯಾಯವಾಗಲಿದೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಲಾಭಕ್ಕಾಗಿ ಮಸೂದೆ:

ಮಹಿಳಾ ಮೀಸಲಾತಿ ಜಾರಿ ವಿಳಂಬದ ಬಗ್ಗೆ ಕೇಂದ್ರವನ್ನು ಟೀಕಿಸಿದ ಅವರು, “ಮೂರನೇ ಎರಡರಷ್ಟು ಬಹುಮತವಿಲ್ಲ ಎಂದು ತಿಳಿದಿದ್ದರೂ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಮರುವಿಂಗಡಣೆಯನ್ನು ಒಟ್ಟಿಗೆ ತರುವ ಅಗತ್ಯವಿರಲಿಲ್ಲ. ಪ್ರಧಾನಿಯವರು ಈ ವಿಷಯದಲ್ಲಿ ಕೇವಲ ರಾಜಕೀಯ ಮಾಡುತ್ತಿದ್ದಾರೆ,” ಎಂದು ಕಿಡಿಕಾರಿದರು.

ದಕ್ಷಿಣದಲ್ಲಿ ಕಾಂಗ್ರೆಸ್ ಅಲೆ:

ಲೋಕಸಭಾ ಚುನಾವಣಾ ಫಲಿತಾಂಶದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಸಿಎಂ, “ನಮ್ಮ ಮೂಲಗಳ ಪ್ರಕಾರ ತಮಿಳುನಾಡಿನಲ್ಲಿ ಡಿಎಂಕೆ ಹಾಗೂ ಮಿತ್ರಪಕ್ಷಗಳ ಮೈತ್ರಿಕೂಟ ಭರ್ಜರಿ ಜಯ ಸಾಧಿಸಲಿದೆ. ಕೇರಳದಲ್ಲಿ ಕಾಂಗ್ರೆಸ್ ಪಕ್ಷವು ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಾಬಲ್ಯ ಮೆರೆಯಲಿದೆ,” ಎಂದು ಭವಿಷ್ಯ ನುಡಿದರು.

ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ:

ಶಾಸಕ ಎನ್.ಎ. ಹ್ಯಾರಿಸ್ ಅವರ ನಿವಾಸದ ಮೇಲೆ ಇಡಿ (ಜಾರಿ ನಿರ್ದೇಶನಾಲಯ) ದಾಳಿ ನಡೆಸಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ಈ ಬಗ್ಗೆ ನನಗೆ ಇನ್ನೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ,” ಎಂದು ಸಂಕ್ಷಿಪ್ತವಾಗಿ ಪ್ರತಿಕ್ರಿಯಿಸಿದರು.

 


Share this with Friends

Related Post