ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಪ್ರಮುಖ ಯೋಜನೆಯಾದ ‘ಗೃಹಲಕ್ಷ್ಮಿ’ಯ 30ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ಮೂಲಕ ಅರ್ಹ ಮಹಿಳಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತಿದ್ದು, ಸರ್ಕಾರವು ತನ್ನ ಭರವಸೆಯನ್ನು ಈಡೇರಿಸಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರವು ನುಡಿದಂತೆ ನಡೆದಿದೆ. ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯಂತೆಯೇ ಪ್ರತಿ ತಿಂಗಳು ಮನೆಯ ಯಜಮಾನಿಗೆ 2,000 ರೂಪಾಯಿಗಳಂತೆ ಕಳೆದ ಮೂರು ವರ್ಷಗಳಲ್ಲಿ ಒಟ್ಟು 60,000 ರೂಪಾಯಿಗಳನ್ನು ತಲುಪಿಸಲಾಗಿದೆ. ಈ ಪ್ರಕ್ರಿಯೆಯು ಯಾವುದೇ ಮಧ್ಯವರ್ತಿಗಳ ಹಾವಳಿ ಅಥವಾ ಭ್ರಷ್ಟಾಚಾರಕ್ಕೆ ಆಸ್ಪದ ನೀಡದೆ, ನೇರ ನಗದು ವರ್ಗಾವಣೆ (DBT) ತಂತ್ರಜ್ಞಾನದ ಮೂಲಕ ಯಶಸ್ವಿಯಾಗಿ ನಡೆದಿದೆ ಎಂದು ಅವರು ವಿವರಿಸಿದ್ದಾರೆ.
ಮಹಿಳಾ ಸಬಲೀಕರಣಕ್ಕೆ ಬಲ:
ಗೃಹಲಕ್ಷ್ಮಿ ಯೋಜನೆಯಿಂದಾಗಿ ರಾಜ್ಯದ ಕೋಟ್ಯಂತರ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗಿದೆ. ಈ ಯೋಜನೆಯ ಹಣವು ಬಡ ಮತ್ತು ಗ್ರಾಮೀಣ ಕುಟುಂಬಗಳ ದೈನಂದಿನ ಜೀವನ ನಿರ್ವಹಣೆ, ಮಕ್ಕಳ ಶಿಕ್ಷಣ, ವೈದ್ಯಕೀಯ ವೆಚ್ಚ ಹಾಗೂ ಪೌಷ್ಟಿಕ ಆಹಾರದ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ದೊಡ್ಡ ಆಸರೆಯಾಗಿದೆ. ಫಲಾನುಭವಿಗಳ ಜೀವನಮಟ್ಟವನ್ನು ಸುಧಾರಿಸುತ್ತಿರುವ ಈ ಜನಪರ ನಿರ್ಧಾರಕ್ಕಾಗಿ ರಾಜ್ಯದ ಗೃಹಲಕ್ಷ್ಮಿಯರ ಪರವಾಗಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ದಿನೇಶ್ ಗೂಳಿಗೌಡ ಹೇಳಿದ್ದಾರೆ.

