ಬೆಂಗಳೂರು: ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಹೆಸರು ಪ್ರಕಟವಾದ ಬೆನ್ನಲ್ಲೇ ಉಂಟಾಗಿರುವ ರಾಜಕೀಯ ಚರ್ಚೆಗಳ ಕುರಿತು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಟಿಕೆಟ್ ಕೈತಪ್ಪಿದ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಯೋಗ್ಯ ಸ್ಥಾನಮಾನ ನೀಡಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.
ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, “ರಾಜ್ಯಸಭೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಸುಮಲತಾ ಅಂಬರೀಶ್ ಅವರ ಹೆಸರು ಪ್ರಸ್ತಾಪವಾಗಿತ್ತು. ಈ ಹಿಂದೆ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸಿದಾಗ ಬಿಜೆಪಿ ಅವರಿಗೆ ಸಂಪೂರ್ಣ ಬೆಂಬಲ ನೀಡಿತ್ತು ಮತ್ತು ಅವರು ಅತ್ಯುತ್ತಮ ಮತಗಳ ಅಂತರದಿಂದ ಜಯಗಳಿಸಿದ್ದರು. ಕಳೆದ ಚುನಾವಣೆಯಲ್ಲಿ ಮೈತ್ರಿ ಧರ್ಮದ ಹಿನ್ನೆಲೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರಿಗಾಗಿ ಸುಮಲತಾ ಅವರು ತಮ್ಮ ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ. ಅವರ ಈ ನಿರ್ಧಾರವನ್ನು ಪಕ್ಷ ಗೌರವಿಸುತ್ತದೆ, ಮುಂದಿನ ದಿನಗಳಲ್ಲಿ ಅವರಿಗೆ ಖಂಡಿತವಾಗಿಯೂ ಸೂಕ್ತ ಸ್ಥಾನಮಾನ ಕಲ್ಪಿಸಲಾಗುವುದು,” ಎಂದರು.
ದೇವೇಗೌಡರ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಅಪಾರ ಗೌರವ:
ಇದೇ ವೇಳೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮರುಆಯ್ಕೆ ವಿಷಯದ ಬಗ್ಗೆ ಮಾತನಾಡಿದ ಅವರು, “ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ಮೂಲಕ ಎನ್‌ಡಿಎ (NDA) ಮೈತ್ರಿಕೂಟಕ್ಕೆ ದೊಡ್ಡ ಶಕ್ತಿ ತುಂಬಿದ್ದಾರೆ. ಅವರ ಬಗ್ಗೆ ಪಕ್ಷಕ್ಕೆ ಮತ್ತು ಹೈಕಮಾಂಡ್‌ಗೆ ಅಪಾರವಾದ ಗೌರವವಿದೆ. ಆದರೆ, ಅವರನ್ನು ಮತ್ತೊಮ್ಮೆ ರಾಜ್ಯಸಭೆಗೆ ಕಳುಹಿಸುವ ಕುರಿತು ರಾಜ್ಯ ಮಟ್ಟದಲ್ಲಿ ಯಾವುದೇ ಅಧಿಕೃತ ಚರ್ಚೆಗಳು ನಡೆದಿರಲಿಲ್ಲ. ಪ್ರಸ್ತುತ ರಾಜಕೀಯ ಸ್ಥಿತಿಗತಿಗಳನ್ನು ಸೂಕ್ತವಾಗಿ ಅವಲೋಕಿಸಿ ಹೈಕಮಾಂಡ್ ಅಭ್ಯರ್ಥಿಯನ್ನು ಅಂತಿಮಗೊಳಿಸಿದೆ,” ಎಂದು ಸ್ಪಷ್ಟಪಡಿಸಿದರು.
ಕಾರ್ಯಕರ್ತರಿಗೆ ಮಣೆ ಹಾಕಿದ ಹೈಕಮಾಂಡ್:
ಪಕ್ಷದ ಹೊಸ ಅಭ್ಯರ್ಥಿಗಳ ಆಯ್ಕೆಯನ್ನು ಸಮರ್ಥಿಸಿಕೊಂಡ ವಿಜಯೇಂದ್ರ ಅವರು, ಈ ಬಾರಿ ಹೈಕಮಾಂಡ್ ಯಾವುದೇ ಗಾಡ್‌ಫಾದರ್ ಇಲ್ಲದ, ಪಕ್ಷಕ್ಕಾಗಿ ತಳಮಟ್ಟದಿಂದ ಪ್ರಾಮಾಣಿಕವಾಗಿ ದುಡಿದ ನಿಷ್ಠಾವಂತ ಕಾರ್ಯಕರ್ತರಿಗೆ ಅತ್ಯುನ್ನತ ಅವಕಾಶಗಳನ್ನು ಕಲ್ಪಿಸಿಕೊಟ್ಟಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಖಾತೆ ಹಂಚಿಕೆಯೇ ಸವಾಲು..
ಮುಖ್ಯಮಂತ್ರಿ ಶಿವಕುಮಾರ್ ಅವರಿಗೆ ಖಾತೆ ಹಂಚಿಕೆಯೇ ಸವಾಲಾಗಿದೆ. ಮೂರು ವರ್ಷ ಅಭಿವೃದ್ಧಿ ಏನೂ ಮಾಡಿಲ್ಲ. ಇನ್ನಾದರೂ ಖಾತೆಗಳಿಗೆ ಕ್ಯಾತೆ ಬಿಟ್ಟು ಕೆಲಸ ಮಾಡಲಿ ಎಂದು ಹೇಳಿದರು. ಮುಖ್ಯಮಂತ್ರಿಗಳು ಬದಲಾಗಿದ್ದಾರೆ ಅಷ್ಟೆ. ಈ ಸರ್ಕಾರದಿಂದ ಅಭಿವೃದ್ಧಿ ನಿರೀಕ್ಷೆ ಮಾಡಲಾಗದು. ಸಾಲದ ಹೊರೆ ಹತ್ತು ಲಕ್ಷ ಕೋಟಿಗೆ ಬಂದಿದೆ. ಸಂಪುಟ ಪೂರ್ಣ ಪ್ರಮಾಣದಲ್ಲಿ ರಚನೆಯಾಗಿಲ್ಲ. ಜಿಲ್ಲಾ ಉಸ್ತುವಾರಿ ಹಂಚಿಕೆ ಆಗಿಲ್ಲ ಎಂದರು.

