ದಾವಣಗೆರೆ: ಜಿಲ್ಲೆಯ ಕೆಲವು ಫಿಟ್‌ನೆಸ್ ಕ್ಲಬ್‌ಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವ ಕುರಿತು ಗಂಭೀರ ಮಾಹಿತಿ ಲಭ್ಯವಾದ ಬೆನ್ನಲ್ಲೇ, ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ತಮ್ಮ ಗೃಹಕಚೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶೇಖರ್ ಹೆಚ್. ತೆಕ್ಕಣ್ಣವರ್ ಅವರೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ಮಹಿಳೆಯರ ಸುರಕ್ಷತೆಗಾಗಿ ಜಿಲ್ಲಾದ್ಯಂತ ತಕ್ಷಣವೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಪೊಲೀಸರಿಗೆ ಕಡಕ್ ಸೂಚನೆ ನೀಡಿದ್ದಾರೆ.
ಸಿಸಿಟಿವಿ ಕಡ್ಡಾಯ ಹಾಗೂ ಕಟ್ಟುನಿಟ್ಟಿನ ನಿಯಮ ಪಾಲನೆ
ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಫಿಟ್‌ನೆಸ್ ಕ್ಲಬ್‌ಗಳು, ಜಿಮ್‌ಗಳು, ವಾಣಿಜ್ಯ ಸಂಕೀರ್ಣಗಳು ಸೇರಿದಂತೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುವ ಸಾರ್ವಜನಿಕ ಸ್ಥಳಗಳಲ್ಲಿ ತಕ್ಷಣವೇ ಪರಿಶೀಲನೆ ನಡೆಸಲು ಸಂಸದರು ಸೂಚಿಸಿದ್ದಾರೆ. ಈ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ, ಸುರಕ್ಷತಾ ಕ್ರಮಗಳು ಹಾಗೂ ಕಾನೂನು ನಿಯಮಗಳನ್ನು ಸರಿಯಾಗಿ ಪಾಲಿಸಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ತಿಳಿಸಲಾಗಿದೆ. ಜಿಮ್ ಮತ್ತು ಕ್ಲಬ್‌ಗಳ ಮಾಲೀಕರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಮಹಿಳಾ ಸುರಕ್ಷತೆಯ ಕುರಿತು ಕಡ್ಡಾಯ ಜಾಗೃತಿ ಮೂಡಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
“ಅಕ್ಕಪಡೆ” ಸಹಾಯವಾಣಿ ಮತ್ತಷ್ಟು ಬಲಪಡಿಸಲು ಆದೇಶ
ಮಹಿಳೆಯರ ರಕ್ಷಣೆಗಾಗಿ ಜಿಲ್ಲೆಯಲ್ಲಿ ಜಾರಿಯಲ್ಲಿರುವ “ಅಕ್ಕಪಡೆ” ಸಹಾಯವಾಣಿಯ ಕಾರ್ಯನಿರ್ವಹಣೆಯನ್ನು ಮತ್ತಷ್ಟು ಚುರುಕುಗೊಳಿಸಲು ಮತ್ತು ಬಲಪಡಿಸಲು ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರು ಸೂಚಿಸಿದ್ದಾರೆ. ಇದರ ಪರಿಣಾಮಕಾರಿ ಕಾರ್ಯವೈಖರಿಯನ್ನು ನಿರಂತರವಾಗಿ ಪರಿಶೀಲಿಸಿ, ಅಗತ್ಯವಿರುವ ಕಡೆಗಳಲ್ಲಿ ತಾಂತ್ರಿಕ ಹಾಗೂ ಕಾರ್ಯಾಚರಣೆಯ ಸುಧಾರಣೆಗಳನ್ನು ತರಲು ತಿಳಿಸಿದರು. ಇದರೊಂದಿಗೆ ಕ್ಷೇತ್ರದಾದ್ಯಂತ ಮಹಿಳಾ ಸುರಕ್ಷತೆಯ ಬಗ್ಗೆ ವ್ಯಾಪಕ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲು ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.
ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ
ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಕಿರುಕುಳದ ಪ್ರಕರಣಗಳಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗದೆ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಇಂತಹ ಕೃತ್ಯಗಳಲ್ಲಿ ಭಾಗಿಯಾಗುವ ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಸದರು ಪೊಲೀಸ್ ಇಲಾಖೆಗೆ ಸ್ಪಷ್ಟಪಡಿಸಿದ್ದಾರೆ.

