ಬೆಂಗಳೂರು,ಮಾ.16: ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು,ಇದನ್ನು ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಆಯೋಗವು ವರದಿಯಲ್ಲಿ
ಮೂಲವೇತನದ ಶೇ.27.5 ರಷ್ಟು ಹೆಚ್ಚಳ ಮಾಡುವಂತೆ ಶಿಫಾರಸು ಮಾಡಿದೆ,ಈ ಬಗ್ಗೆ ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ ಸುಧಾಕರ್ ರಾವ್ ಅಧ್ಯಕ್ಷತೆಯ ಏಳನೇ ವೇತನ ಆಯೋಗದ ವರದಿ ಸ್ವೀಕರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ ಎಂದು ಹೇಳಿದರು.
ಶುಕ್ರವಾರ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಿದ್ದೇನೆ ಎಂದು ತಿಳಿಸಿದರು.
ವರದಿಯಲ್ಲಿ ಕನಿಷ್ಠ ಮೂಲವೇತನವನ್ನು 17,000 ರೂ. ಗಳಿಂದ 27,000 ರೂ.ಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು,ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ ಎಂದು ಹೇಳಿದರು.
ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿ ನಂತರ ಸಲಹೆಗಳನ್ನು ನೀಡಲಿದೆ,ಅದರ ಆಧಾರದ ಮೇಲೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.