ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಬಹುನಿರೀಕ್ಷಿತ ಮುಂಗಾರು ಅಧಿವೇಶನವು ಆಗಸ್ಟ್ 13 ರಿಂದ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಇದರೊಂದಿಗೆ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಚಿವ ಸಂಪುಟ ವಿಸ್ತರಣೆಯೂ ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದು ಅವರು ಸುಳಿವು ನೀಡಿದ್ದಾರೆ.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಈ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದರು.ಸದನದಲ್ಲಿ ವಿಪಕ್ಷಗಳ ಎದುರಿಸಲು ಸರ್ಕಾರ ಸನ್ನದ್ಧವಾಗಿದೆ ಎಂದು ಪ್ರಕಟಿಸಿದರು.
ಅಧಿವೇಶನಕ್ಕೂ ಮುನ್ನ ಸಂಪುಟ ಕಸರತ್ತು ಅಂತ್ಯ
ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಪಕ್ಷದ ವರಿಷ್ಠರ ಜತೆ ಅಂತಿಮ ಹಂತದ ಮಾತುಕತೆಗಳು ಪ್ರಗತಿಯಲ್ಲಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿರಿಯ ನಾಯಕರಾದ ಸಿದ್ದರಾಮಯ್ಯ ಹಾಗೂ ಪಕ್ಷದ ಪ್ರಮುಖರು ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿ ಹೊಸ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ. ಪ್ರಾದೇಶಿಕ ಸಮತೋಲನ, ಸಮುದಾಯಗಳ ಪ್ರಾತಿನಿಧ್ಯ ಹಾಗೂ ಯುವ ಮುಖಗಳಿಗೆ ಆದ್ಯತೆ ನೀಡಿ ಈ ವಿಸ್ತರಣೆ ಪ್ರಕ್ರಿಯೆ ನಡೆಯಲಿದ್ದು, ಮುಂಗಾರು ಅಧಿವೇಶನ ಆರಂಭವಾಗುವ ಮುನ್ನವೇ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ.
ಸದನದಲ್ಲಿ ಭಾರಿ ಜಟಾಪಟಿ ಸಾಧ್ಯತೆ
ಆಗಸ್ಟ್ 13 ರಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ರಾಜ್ಯದ ಪ್ರಚಲಿತ ವಿದ್ಯಮಾನಗಳು, ಕೃಷಿ ವಲಯದ ಸವಾಲುಗಳು ಹಾಗೂ ವಿವಿಧ ಇಲಾಖೆಗಳ ಪ್ರಮುಖ ಮಸೂದೆಗಳ ಕುರಿತು ಸಮಗ್ರ ಚರ್ಚೆ ನಡೆಯಲಿದೆ. ಇತ್ತೀಚೆಗೆ ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ನೇಮಕಾತಿ ಅಕ್ರಮದ ಆರೋಪಗಳು ಹಾಗೂ ಕಾನೂನು ಸುವ್ಯವಸ್ಥೆಯಂತಹ ಗಂಭೀರ ವಿಷಯಗಳು ಮುನ್ನೆಲೆಗೆ ಬರಲಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಸದನದಲ್ಲಿ ಭಾರಿ ಜಟಾಪಟಿ ನಡೆಯುವ ನಿರೀಕ್ಷೆಯಿದೆ.

