Wed. Jul 29th, 2026

ಅರ್ಹರಿಗೆ ಶಿಕ್ಷಣ ಖಾತೆ ನೀಡಿ, ಪ್ರಹ್ಲಾದ್ ಜೋಷಿ ಅವರಿಂದ ತಕ್ಷಣವೇ ಕಿತ್ತುಕೊಳ್ಳಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಒತ್ತಾಯ

Share this with Friends

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶದ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಒಂದಿಷ್ಟು ಕಾಳಜಿ ಇದ್ದರೆ ತಕ್ಷಣವೇ ಶಿಕ್ಷಣ ಖಾತೆಯನ್ನು ಪ್ರಹ್ಲಾದ್ ಜೋಷಿ ಅವರಿಂದ ಕಿತ್ತುಕೊಂಡು, ಅರ್ಹರಾದ ಬೇರೆ ಯಾವುದೇ ನಾಯಕರಿಗೆ ಈ ಮಹತ್ವದ ಹೊಣೆಗಾರಿಕೆಯನ್ನು ವಹಿಸಿಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಲವಾಗಿ ಒತ್ತಾಯಿಸಿದ್ದಾರೆ.

ಕರ್ನಾಟಕದ ಸಂಸದರೊಬ್ಬರು ದೇಶದ ಶಿಕ್ಷಣ ಸಚಿವರಾಗಿದ್ದಕ್ಕೆ ನಾವೆಲ್ಲರೂ ಹೆಮ್ಮೆ ಪಡಬೇಕಾಗಿತ್ತು. ಆದರೆ ಈ ಹಿಂದೆ ಮಹಿಳೆಯ ಮೇಲಿನ ಅತ್ಯಾಚಾರಿಗಳನ್ನು ಸಮರ್ಥಿಸಿದ್ದ ಜೋಷಿ ಅವರಿಗೆ ಇಂತಹ ಜವಾಬ್ದಾರಿಯುತ ಖಾತೆಯನ್ನು ನೀಡುವ ಮೂಲಕ ಪ್ರಧಾನಿಯವರು ಕನ್ನಡಿಗರೆಲ್ಲರೂ ತಲೆತಗ್ಗಿಸುವಂತೆ ಮಾಡಿದ್ದಾರೆ ಎಂದು ಸಿಎಂ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ನಿರ್ಮನಗೊಂಡ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಹ್ಲಾದ್ ಜೋಷಿ ಅವರ ಸೈದ್ಧಾಂತಿಕ ನಿಲುವುಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದಿರುವ ಸಿದ್ದರಾಮಯ್ಯ, ಇವರಿಬ್ಬರೂ ಸಂಘ ಪರಿವಾರದ ಎಬಿವಿಪಿಯಿಂದ ಬಂದ ಸೈದ್ಧಾಂತಿಕ ಅವಳಿ-ಜವಳಿಗಳಾಗಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ. ಮಹಿಳೆಯರು, ದಲಿತರು, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಬಗ್ಗೆ ಆರ್‌ಎಸ್‌ಎಸ್ ಹೊಂದಿರುವ ಅಭಿಪ್ರಾಯವನ್ನೇ ಇವರೂ ಹೊಂದಿದ್ದಾರೆ. ಇದೇ ಕಾರಣಕ್ಕಾಗಿ ಪ್ರಧಾನ್ ಸ್ಥಾನಕ್ಕೆ ಜೋಷಿ ಅವರನ್ನು ತರಲಾಗಿದ್ದು, ಇದು ಕೇವಲ ಪಾತ್ರಧಾರಿಗಳ ಬದಲಾವಣೆಯಷ್ಟೇ ಹೊರತು, ಸೂತ್ರಧಾರಿಗಳಾದ ಆರ್‌ಎಸ್‌ಎಸ್ ನಿರ್ದೇಶನದಂತೆಯೇ ಇವರು ನಡೆದುಕೊಳ್ಳಬೇಕಾಗುತ್ತದೆ ಎಂದು ಟೀಕಿಸಿದ್ದಾರೆ.

ಗುಜರಾತ್ ಗಲಭೆಯ ಕಾಲದಲ್ಲಿ ಬಿಲ್ಕಿಸ್ ಭಾನು ಎಂಬ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರಿಗಳನ್ನು 2022ರಲ್ಲಿ ಗುಜರಾತ್ ಸರ್ಕಾರ ಬಿಡುಗಡೆಗೊಳಿಸಿದ್ದನ್ನು ಪ್ರಹ್ಲಾದ ಜೋಷಿ ಅವರು ಸಮರ್ಥಿಸಿ ಮಾತನಾಡಿದ್ದರು. ಇಂತಹ ಮನಸ್ಥಿತಿಯವರು ದೇಶದ ಶಿಕ್ಷಣ ವ್ಯವಸ್ಥೆಯನ್ನು ಮುನ್ನಡೆಸಿದರೆ ವಿದ್ಯಾರ್ಥಿಗಳ ಭವಿಷ್ಯ ಏನಾಗಬಹುದು ಎನ್ನುವುದು ದೇಶದ ಜನರ ಈಗಿನ ಬಹುದೊಡ್ಡ ಆತಂಕವಾಗಿದೆ ಎಂದು ಸಿಎಂ ಹೇಳಿದ್ದಾರೆ. ಈಗಾಗಲೇ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ಅವರು ಸದನದಲ್ಲಿ ಪ್ರಹ್ಲಾದ್ ಜೋಷಿ ಅವರ ಮುಖವಾಡವನ್ನು ಕಿತ್ತೊಗೆದು ದೇಶದ ಮುಂದೆ ನಿಲ್ಲಿಸಿದ್ದಾರೆ. ಸದನದಲ್ಲಿ ಅವರ ಬಾಯಿ ಮುಚ್ಚಿಸಬಹುದೇ ಹೊರತು ದೇಶದ ಕೋಟ್ಯಂತರ ಜನರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಎಚ್ಚರಿಸಿದ್ದಾರೆ.

 

 


Share this with Friends

Related Post