Thu. Jul 30th, 2026

ಕಾವೇರಿ ನೀರು ಹಂಚಿಕೆ ಬಿಕ್ಕಟ್ಟು: ಆಗಸ್ಟ್ 2ರಂದು ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸರ್ವಪಕ್ಷ ಸಭೆ

Share this with Friends

ನವದೆಹಲಿ:ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ಕರ್ನಾಟಕಕ್ಕೆ ನಿರ್ದೇಶನ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್ ಆಗಿದೆ. ಕಾವೇರಿ ಕೊಳ್ಳದ ಜಲಾಶಯಗಳ ಇಂದಿನ ಸ್ಥಿತಿಗತಿ ಹಾಗೂ ಮುಂಬರುವ ದಿನಗಳಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಅಭಾವವನ್ನು ಮನಗಂಡು, ಮುಂದಿನ ಕಾನೂನಾತ್ಮಕ ಹೆಜ್ಜೆಗಳ ಕುರಿತು ಒಮ್ಮತದ ತೀರ್ಮಾನಕ್ಕೆ ಬರಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತುರ್ತು ಸರ್ವಪಕ್ಷ ಸಭೆಯನ್ನು ಆಯೋಜಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ರಾಜ್ಯದ ಜನರಿಗೆ ಕುಡಿಯುವ ನೀರಿನ ಭದ್ರತೆ ಒದಗಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಹೀಗಾಗಿ ಪ್ರಸ್ತುತ ಪರಿಸ್ಥಿತಿಯನ್ನು ಎದುರಿಸಲು ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರನ್ನು ಒಳಗೊಂಡಂತೆ ಹಿರಿಯ ರಾಜಕಾರಣಿಗಳು ಮತ್ತು ಕಾನೂನು ತಜ್ಞರ ಸಲಹೆ ಪಡೆಯಲು ಈ ಸಭೆ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಮೇಕೆದಾಟು ಯೋಜನೆ ಜಾರಿಗೆ ಒತ್ತಡ

ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕೆ ನೆರೆ ರಾಜ್ಯಗಳ ಪೂರ್ವ ಸಮ್ಮತಿ ಅಗತ್ಯವಿಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಸಂಸತ್ತಿನಲ್ಲಿ ನೀಡಿರುವ ಲಿಖಿತ ಉತ್ತರದ ಬೆನ್ನಲ್ಲೇ ಕಾವೇರಿ ನೀರಿನ ಹೊಸ ಬಿಕ್ಕಟ್ಟು ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ, ಆಗಸ್ಟ್ 2ರಂದು ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಕಾವೇರಿ ನೀರಿನ ರಕ್ಷಣೆ ಮಾಡುವುದರ ಜೊತೆಗೆ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಶೀಘ್ರವಾಗಿ ತಾಂತ್ರಿಕ ಅನುಮತಿ ಪಡೆಯಲು ಎಲ್ಲ ಪಕ್ಷಗಳು ಒಟ್ಟಾಗಿ ಕೇಂದ್ರದ ಮೇಲೆ ಒತ್ತಡ ಹೇರುವ ಕುರಿತೂ ಚರ್ಚೆಗಳು ನಡೆಯಲಿವೆ.

ರಾಜ್ಯದ ರೈತರ ಹಿತರಕ್ಷಣೆ ಮತ್ತು ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ ವಿವಿಧ ಜಿಲ್ಲೆಗಳ ಕುಡಿಯುವ ನೀರಿನ ಹಕ್ಕನ್ನು ಕಾಪಾಡಲು ಸರ್ಕಾರವು ಕಾನೂನು ಹೋರಾಟವನ್ನು ತೀವ್ರಗೊಳಿಸಲು ಸಜ್ಜಾಗಿದೆ.

 

 


Share this with Friends

Related Post