ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ಯಂತ್ರಕ್ಕೆ ಮತ್ತಷ್ಟು ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ನಾಳೆ (ಆಗಸ್ಟ್ 11) ಸರ್ಕಾರದ ಎಲ್ಲಾ ಹಂತದ ಅಧಿಕಾರಿಗಳು ಮತ್ತು ನೌಕರರೊಂದಿಗೆ ಬೃಹತ್ ಸಂವಾದ ಸಭೆ ನಡೆಸಲಿದ್ದಾರೆ.
ನಾಳೆ ಪೂರ್ವಾಹ್ನ 11:00 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಈ ಮಹತ್ವದ ಕಾರ್ಯಕ್ರಮ ಆಯೋಜನೆಗೊಂಡಿದ್ದು, ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಜಿಲ್ಲಾ, ತಾಲ್ಲೂಕು ಹಾಗೂ ಹೋಬಳಿ ಮಟ್ಟದವರೆಗಿನ ಅಧಿಕಾರಿ-ನೌಕರರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಏಕಕಾಲದಲ್ಲಿ ತಲುಪಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಕಡ್ಡಾಯ ಹಾಜರಾತಿಗೆ ಸೂಚನೆ:
ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಸಂವಾದದಲ್ಲಿ ಎಲ್ಲರ ಭಾಗವಹಿಸುವಿಕೆಯನ್ನು ಕಡ್ಡಾಯಗೊಳಿಸಿದ್ದಾರೆ. ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಖುದ್ದಾಗಿ ಉಪಸ್ಥಿತರಿರಲಿದ್ದಾರೆ.
ಕೆಳಹಂತದವರೆಗೂ ತಲುಪಲಿರುವ ಸಂವಾದ:
ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು (DC), ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು (CEO), ಪೊಲೀಸ್ ವರಿಷ್ಠಾಧಿಕಾರಿಗಳು (SP) ಸೇರಿದಂತೆ ಜಿಲ್ಲಾ, ತಾಲ್ಲೂಕು ಮತ್ತು ಹೋಬಳಿ ಮಟ್ಟದ ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿಯು ಆಯಾ ಕೇಂದ್ರಗಳಿಂದಲೇ ವಿಡಿಯೋ ಲಿಂಕ್ ಮೂಲಕ ಈ ಸಂವಾದದಲ್ಲಿ ಭಾಗವಹಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಈ ಸಂವಾದ ಅತ್ಯಂತ ನಿರ್ಣಾಯಕ ಎನಿಸಿಕೊಂಡಿದೆ.

