ಬೆಂಗಳೂರು: “ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಕಾರಣಕ್ಕೂ ಒಬ್ಬನೇ ಒಬ್ಬ ಅರ್ಹ ಮತದಾರನೂ ತನ್ನ ಹಕ್ಕಿನಿಂದ ವಂಚಿತನಾಗಬಾರದು. ಸಾರ್ವಜನಿಕರು ತಮ್ಮ ಹೆಸರು ಹಾಗೂ ವಿವರಗಳನ್ನು ಕಡ್ಡಾಯವಾಗಿ ಪರಿಶೀಲಿಸಿಕೊಳ್ಳುವಂತೆ ವ್ಯಾಪಕ ಜಾಗೃತಿ ಮೂಡಿಸಬೇಕು” ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ಮುಖ್ಯಮಂತ್ರಿ ಅವರೊಂದಿಗೆ ನಡೆದ ಸರ್ಕಾರಿ ನೌಕರರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,SIR ಪ್ರಕ್ರಿಯೆಯಲ್ಲಿ ಸದ್ಯ ಹೆಚ್ಚಿನ ಸಂಖ್ಯೆಯ ಮತದಾರರ ಹೆಸರುಗಳು ತಪಾಸಣೆಗೆ ಒಳಪಟ್ಟಿವೆ. ಇಂತಹ ಸಂದರ್ಭದಲ್ಲಿ ಜನರಿಗೆ ಸೂಕ್ತ ಮಾಹಿತಿ ಮತ್ತು ಮಾರ್ಗದರ್ಶನ ತಲುಪಿಸುವುದು ಆಡಳಿತ ವ್ಯವಸ್ಥೆಯ ಜವಾಬ್ದಾರಿಯಾಗಿದೆ. ಇದಕ್ಕಾಗಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಪರಿಣಾಮಕಾರಿ ಮಾಹಿತಿ ಅಭಿಯಾನಗಳನ್ನು ಹಮ್ಮಿಕೊಳ್ಳಬೇಕು ಎಂದು ಸಚಿವರು ಸೂಚಿಸಿದರು. ಅರ್ಹ ಮತದಾರರ ಹಕ್ಕುಗಳನ್ನು ರಕ್ಷಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯವಾಗಿದೆ ಎಂದು ಅವರು ಪ್ರತಿಪಾದಿಸಿದರು.
ಜನಸ್ನೇಹಿಯಾಗಿ ಕೆಲಸ ಮಾಡಲು ಕರೆ:
ಮತದಾರರ ಹಕ್ಕುಗಳ ರಕ್ಷಣೆಯ ಜೊತೆಗೆ ಮಾದಕ ವಸ್ತುಗಳ ನಿಯಂತ್ರಣ ಹಾಗೂ ಸಾರ್ವಜನಿಕ ಜಾಗೃತಿ ಮೂಡಿಸುವಂತಹ ಪ್ರಮುಖ ವಿಚಾರಗಳ ಕಡೆಗೂ ಅಧಿಕಾರಿಗಳು ಗಮನ ಹರಿಸಬೇಕು. ಪೊಲೀಸ್ ಇಲಾಖೆ ಮತ್ತು ನಾಗರಿಕ ಆಡಳಿತ ವ್ಯವಸ್ಥೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಇಡೀ ವ್ಯವಸ್ಥೆಯು ಸಾರ್ವಜನಿಕರೊಂದಿಗೆ ಜನಸ್ನೇಹಿಯಾಗಿ ಹಾಗೂ ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.
ನಶೆಮುಕ್ತ ಕರ್ನಾಟಕ ನಿರ್ಮಾಣಕ್ಕೆ ಪೊಲೀಸ್ ಇಲಾಖೆ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸಬೇಕು :
ಕರ್ನಾಟಕವನ್ನು ನಶೆಮುಕ್ತ ರಾಜ್ಯವನ್ನಾಗಿಸುವ ಮುಖ್ಯಮಂತ್ರಿ ಅವರ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ರಾಜ್ಯದ ಪೊಲೀಸ್ ಇಲಾಖೆಯ ಮೇಲಿದೆ. ಮಾದಕ ವಸ್ತುಗಳ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರಿಯಾಂಕ್ ಖರ್ಗೆ ಸೂಚಿಸಿದರು.
ಮಾದಕ ವಸ್ತುಗಳ ವಿರುದ್ಧ ಕಠಿಣ ಕ್ರಮಗಳ ಜೊತೆಗೆ ಜನರಲ್ಲಿ, ವಿಶೇಷವಾಗಿ ಯುವಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೂ ಆದ್ಯತೆ ನೀಡಬೇಕು.ಈಗಾಗಲೇ ರಾಜ್ಯದಲ್ಲಿ ‘RISE’ ಹಾಗೂ ‘ಬೇಡ BRO’ ಅಭಿಯಾನಗಳ ಮೂಲಕ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಇದೇ ಮಾದರಿಯಲ್ಲಿ ತಾಲ್ಲೂಕು ಮಟ್ಟದಲ್ಲಿಯೂ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಯುವಕರು ಹಾಗೂ ಸಾರ್ವಜನಿಕರಲ್ಲಿ ಮಾದಕ ವಸ್ತುಗಳ ವಿರುದ್ಧ ಅರಿವು ಮೂಡಿಸುವಂತೆ ತಾಲ್ಲೂಕು ಮಟ್ಟದ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಬರ ಪರಿಸ್ಥಿತಿಯಲ್ಲಿ ಅನುಸರಿಸಿದ SOP ಮಾದರಿಯಲ್ಲಿ ಕಾರ್ಯನಿರ್ವಹಿಸಿ:
ಈ ಹಿಂದೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ಸಂದರ್ಭದಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಲು ರೂಪಿಸಿ ಜಾರಿಗೊಳಿಸಲಾಗಿದ್ದ ಪ್ರಮಾಣಿತ ಕಾರ್ಯಾಚರಣಾ ವಿಧಾನ (SOP) ಮಾದರಿಯನ್ನು ಗಮನದಲ್ಲಿಟ್ಟುಕೊಂಡು, ಪರಿಸ್ಥಿತಿಗೆ ಅನುಗುಣವಾಗಿ ಇಲಾಖೆಗಳು ಪೂರ್ವಸಿದ್ಧತೆ ಹಾಗೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಸಮಸ್ಯೆ ಎದುರಾದ ನಂತರ ಪರಿಹಾರ ಕಂಡುಕೊಳ್ಳುವುದಕ್ಕಿಂತ, ಮುನ್ನೆಚ್ಚರಿಕೆ ಕ್ರಮಗಳ ಮೂಲಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ವ್ಯವಸ್ಥೆ ರೂಪಿಸಿಕೊಳ್ಳಬೇಕು. ಇದಕ್ಕಾಗಿ ಈಗಾಗಲೇ ರೂಪಿಸಲಾಗಿರುವ ಕಾರ್ಯವಿಧಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಅವರು ಸಲಹೆ ನೀಡಿದರು.
ಮಾದಕ ವಸ್ತುಗಳ ನಿಯಂತ್ರಣ, ಸಾರ್ವಜನಿಕ ಜಾಗೃತಿ ಹಾಗೂ ಮತದಾರರ ಹಕ್ಕುಗಳ ರಕ್ಷಣೆಯಂತಹ ಪ್ರಮುಖ ವಿಚಾರಗಳಲ್ಲಿ ಪೊಲೀಸ್ ಮತ್ತು ಆಡಳಿತ ವ್ಯವಸ್ಥೆಗಳು ಜನಸ್ನೇಹಿಯಾಗಿ ಹಾಗೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

