Wed. Dec 25th, 2024

ಸ್ವೀಪ್ ಚಟುವಟಿಕೆ ಪರಿಣಾಮಕಾರಿ ಅನುಷ್ಠಾನಕ್ಕೆ ಕೆ.ಎಂ.ಗಾಯಿತ್ರಿ ಸೂಚನೆ

Share this with Friends

ಮೈಸೂರು, ಮಾ.19: ಜಿಲ್ಲೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಿಸಲು ಮತ್ತು ಮತದಾನದ ಕುರಿತು ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ರಚನೆ ಮಾಡಲಾಗಿದೆ.

ಲೋಕಸಭಾ ಚುನಾವಣೆ ಸಂಬಂಧ ಜಿಲ್ಲೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಿಸಲು ಸ್ವೀಪ್ ಕಾರ್ಯಕ್ರಮ ಅನುಷ್ಠಾನಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿ ಕೆ.ಎಂ.ಗಾಯಿತ್ರಿ ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸ್ವೀಪ್ ಚಟುವಟಿಕೆ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಸಂಬಂಧ ವಿವಿಧ ಇಲಾಖೆಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ವಿಶೇಷ ಚೇತನರು, ಹಿರಿಯ ನಾಗರಿಕರು, ತೃತೀಯಲಿಂಗಿಗಳು ಹಾಗೂ ವಲಸೆ ಕಾರ್ಮಿಕರು ಮತದಾರರ ಪಟ್ಟಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೇರ್ಪಡೆಗೊಳ್ಳುವ ಸಲುವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಸೂಚಿಸಿದರು.

ಜಿಲ್ಲಾ ವಾರ್ತಾ ಮತ್ತು ಪ್ರಚಾರಾಧಿಕಾರಿಗಳು, ಎಲ್ಲಾ ಇಲಾಖೆಗಳು ಕೈಗೊಳ್ಳುವ ಸ್ವೀಪ್ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದು ಪ್ರತಿನಿತ್ಯ ಪತ್ರಿಕೆಗಳಲ್ಲಿ ಪ್ರಚಾರ ಮಾಡಬೇಕು. ಮೈಸೂರು ಆಕಾಶವಾಣಿ ಮೂಲಕ ಜನಸಾಮಾನ್ಯರಿಗೆ ಮತದಾನದ ಮಹತ್ವ ಬಗ್ಗೆ ಅಮೂಲ್ಯ ವ್ಯಕ್ತಿಗಳ ಸಂದರ್ಶನ, ಸ್ಕ್ರಿಪ್ಟ್, ಮತದಾನದ ಹಾಡುಗಳ ಮೂಲಕ ಅರಿವು ಮೂಡಿಸಬೇಕು ಎಂದು ಹೇಳಿದರು.

ಬಿಸಿಎಂ ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ರಸಪ್ರಶ್ನೆ, ಪ್ರಭಂದ ಸ್ಪರ್ಧೆಯನ್ನ ನಡೆಸುವ ಮೂಲಕ ಯುವ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿ,ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಜನಸಾಮಾನ್ಯರಿಗೆ ಮನೆ ಮನೆಗಳಿಗೆ ತೆರಳಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸುವಂತೆ ಸೂಚಿಸಿದರು.

‘ಚುನಾವಣಾ ಪರ್ವ ದೇಶದ ಗರ್ವ ಯಾವೊಬ್ಬ ಮತದಾರನೂ ಮತದಾನದಿಂದ ಹೊರಗುಳಿಯಬಾರದು ‘ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ’ ಎಂಬ ಧ್ಯೇಯ ಹೊಂದಬೇಕು ಎಂಬ ಘೋಷವಾಕ್ಯದೊಂದಿಗೆ ಮತದಾರರ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಶುಭ, ಕೇಂದ್ರ ಪ್ರಚಾರ ಇಲಾಖೆಯ ಉಪನಿರ್ದೇಶಕರಾದ ಶೃತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


Share this with Friends

Related Post