Sat. Sep 26th, 2026

ಚುನಾವಣಾ ಆಯೋಗದ ದುರ್ಬಳಕೆ ಆರೋಪ:ಜ್ಞಾನೇಶ್ ಕುಮಾರ್ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

Share this with Friends

ಬೆಂಗಳೂರು: ದೇಶದ ಸಾಂವಿಧಾನಿಕ ಸಂಸ್ಥೆಯಾದ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಮತ್ತು ಮತದಾರರ ಪಟ್ಟಿಯಿಂದ ವ್ಯವಸ್ಥಿತವಾಗಿ ಹೆಸರುಗಳನ್ನು ಕೈಬಿಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಧರಣಿ ನಡೆಸಿದರು.

ಇಂದು ರಾಜಧಾನಿಯ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮುಖವಾಡ ಧರಿಸಿ, ಕೈಕೋಳ ಪ್ರದರ್ಶಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಆಯೋಗದ ಏಕಪಕ್ಷೀಯ ತೀರ್ಮಾನಗಳನ್ನು ಒಪ್ಪಲ್ಲ” :

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, “ಚುನಾವಣಾ ಆಯೋಗದಲ್ಲಿ ಮೂವರು ಕಮಿಷನರ್‌ಗಳಿದ್ದರೂ ಉಳಿದ ಇಬ್ಬರ ಆಕ್ಷೇಪ ಮತ್ತು ಒಪ್ಪಿಗೆ ಇಲ್ಲದೆಯೇ ಜ್ಞಾನೇಶ್ ಕುಮಾರ್ ಅವರು ಏಕಪಕ್ಷೀಯವಾಗಿ ಆದೇಶಗಳನ್ನು ಹೊರಡಿಸುತ್ತಿದ್ದಾರೆ ಎಂದು ಮಾಧ್ಯಮಗಳೇ ವರದಿ ಮಾಡಿವೆ. ಸಂವಿಧಾನ ಬದ್ಧ ಸಂಸ್ಥೆಯೊಂದರಲ್ಲಿ ಇಂತಹ ಸರ್ವಾಧಿಕಾರಿ ಧೋರಣೆ ನಡೆಯುತ್ತಿರುವುದು ನಾಚಿಕೆಗೇಡು. ದೇಶದ ಜನ ಸಾಮಾನ್ಯರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ. ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಿ ಬಂಧಿಸಬೇಕು,” ಎಂದು ಒತ್ತಾಯಿಸಿದರು.

“ಇದು ಮತ ಕಳ್ಳತನದ ವ್ಯವಸ್ಥಿತ ಪಿತೂರಿ” :

ವೇದಿಕೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ದೇಶದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಬೇಕಾದ ಚುನಾವಣಾ ಆಯೋಗವು ಇಂದು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ಕೈಗೊಂಬೆಯಾಗಿದೆ. ಎಸ್‌ಐಆರ್ (SIR) ಹೆಸರಿನಲ್ಲಿ ದೇಶಾದ್ಯಂತ ಲಕ್ಷಾಂತರ ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಇದು ನೇರವಾದ ಮತ ಕಳ್ಳತನ. ನಮ್ಮ ನಾಯಕ ರಾಹುಲ್ ಗಾಂಧಿ ಅವರು ಈ ಮತಗಳ್ಳತನದ ವಿರುದ್ಧ ಧ್ವನಿ ಎತ್ತಿದಾಗ ಅವರಿಗೆ ಕ್ಷಮೆಯಾಚಿಸಲು ಹೇಳಿದ ಜ್ಞಾನೇಶ್ ಕುಮಾರ್ ಅವರಿಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ. ಪ್ರಜಾಪ್ರಭುತ್ವದ ರಕ್ಷಣೆಗಾಗಿ ಇಂತಹ ಅಸಂವಿಧಾನಿಕ ನಿರ್ಧಾರ ಕೈಗೊಂಡಿರುವ ಸಿಇಸಿ ಕೂಡಲೇ ರಾಜೀನಾಮೆ ನೀಡಬೇಕು ಮತ್ತು ಅವರ ವಿರುದ್ಧ ತನಿಖೆಯಾಗಬೇಕು,” ಎಂದು ಗುಡುಗಿದರು.

“ನಂಬಿಕೆ ಕಳೆದುಕೊಂಡಿರುವ ವ್ಯಕ್ತಿ ಹುದ್ದೆಯಲ್ಲಿರಬಾರದು”:

ಆಂದೋಲನದಲ್ಲಿ ಮಾತನಾಡಿದ ಮಾಜಿ ಸಚಿವ ದಿನೇಶ್ ಗುಂಡೂರಾವ್, “ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ಉಳಿಸಬೇಕಾದರೆ ಜ್ಞಾನೇಶ್ ಕುಮಾರ್ ಅವರನ್ನು ಸರ್ಕಾರ ವಜಾ ಮಾಡಬೇಕು, ಇಲ್ಲವೇ ಅವರೇ ಸ್ವಯಂಪ್ರೇರಿತರಾಗಿ ಕೆಳಗಿಳಿಯಬೇಕು. ದೇಶದ ಯಾವುದೇ ರಾಜಕೀಯ ಪಕ್ಷಕ್ಕೂ ಇಂದಿನ ಚುನಾವಣಾ ಆಯೋಗದ ಮುಖ್ಯಸ್ಥರ ಮೇಲೆ ವಿಶ್ವಾಸ ಉಳಿದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಅವರು ಆ ಹುದ್ದೆಯಲ್ಲಿ ಮುಂದುವರಿಯಲು ಯಾವುದೇ ನೈತಿಕ ಹಕ್ಕಿಲ್ಲ,” ಎಂದು ಕಟುವಾಗಿ ಟೀಕಿಸಿದರು. “ದೇಶಾದ್ಯಂತ ಹೋರಾಟದ ಕಿಡಿ”:

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮಾತನಾಡಿ, “ಇದು ಕೇವಲ ಬೆಂಗಳೂರಿನ ಪ್ರತಿಭಟನೆಯಲ್ಲ, ಜ್ಞಾನೇಶ್ ಕುಮಾರ್ ಅವರ ಅಸಂವಿಧಾನಿಕ ನಡೆಯ ವಿರುದ್ಧ ದೇಶಾದ್ಯಂತ ಹೋರಾಟ ಆರಂಭವಾಗಿದೆ. ಮೊದಲ ಹಂತವಾಗಿ ಇಂದು ನಾವು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟಿಸಿದ್ದೇವೆ, ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಉಗ್ರ ಹೋರಾಟ ರೂಪಿಸಲಾಗುವುದು,” ಎಂದು ಎಚ್ಚರಿಕೆ ನೀಡಿದರು.

 


Share this with Friends

Related Post