ಬೆಂಗಳೂರು,ಮಾ.20: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿಯೂ ಎನ್‌ಡಿಎ ಮೈತ್ರಿಕೂಟ ಗೆಲ್ಲುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು,ನಮ್ಮ ಮುಖಂಡರ ಭಾವನೆಗಳನ್ನಷ್ಟೇ ನಾನು ಹೇಳಿದ್ದೇನೆ, ಈ ಬಗ್ಗೆ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಜತೆ ಚರ್ಚೆ ಮಾಡಿದ್ದೇನೆ, ನಾನು ಹೃದಯ ಶಸ್ತ್ರಚಿಕಿತ್ಸೆಗಾಗಿ ಚೆನ್ನೈಗೆ ಹೋಗುತ್ತಿದ್ದೇನೆ. ನಾನು ಬರುವವರೆಗೂ ಒಮ್ಮತವಾಗಿ ಮೈತ್ರಿ ಧರ್ಮಕ್ಕೆ ಬದ್ಧರಾಗಿ ಚುನಾವಣೆ ಕೆಲಸ ಮಾಡಿಕೊಂಡು ಹೋಗುವಂತೆ ನಮ್ಮ ಕಾರ್ಯಕರ್ತರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಒಂದು ವಾರದಲ್ಲಿ ನಾನು ವಾಪಸ್ ಬರುತ್ತೇನೆ,ಯಾರೂ ಸಮಯ ವ್ಯರ್ಥ ಮಾಡಬಾರದು,ಆಸ್ಪತ್ರೆಯಿಂದ ಬಂದ ಕೂಡಲೇ ನಾನು ಮಂಡ್ಯದಿಂದ ಸ್ಪರ್ಧೆ ಮಾಡುತ್ತೇನೊ ಇಲ್ಲವೋ ಎಂಬುದನ್ನು ತಿಳಿಸುತ್ತೇನೆ ಎಂದರು ಹೆಚ್.ಡಿ.ಕೆ.
ಹಾಸನ, ಮಂಡ್ಯ,ಕೋಲಾರ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು. ಕೋಲಾರ ಕ್ಷೇತ್ರದ ಬಗ್ಗೆ ಗೊಂದಲ ನಿವಾರಣೆ ಆಗಿದೆ. ಆಸ್ಪತ್ರೆಯಿಂದ ಬಂದ ಕೂಡಲೇ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮಂಡ್ಯ ಜಿಲ್ಲೆಯ ಕಾರ್ಯಕರ್ತರು ನಿರಾಶೆ ಪಡಬೇಕಿಲ್ಲ. ಅವರಿಗೆ ಒಪ್ಪಿಗೆಯಾಗುವ ಒಳ್ಳೆಯ ನಿರ್ಧಾರವನ್ನೇ ಪ್ರಕಟಿಸುತ್ತೇನೆ ಎಂದು ಮಾರ್ಮಿಕವಾಗಿ ಕುಮಾರಸ್ವಾಮಿ ನುಡಿದರು.