ಬೆಂಗಳೂರು: ಮತದಾರರ ಪಟ್ಟಿಗೆ ಸಂಬಂಧಿಸಿದ ‘ಫಾರಂ ಸಂಖ್ಯೆ 7’ರ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಿಸಿದರೆ ಪಕ್ಷವು ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಎಚ್ಚರಿಕೆ ನೀಡಿದ್ದಾರೆ.
ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕರ (DGP) ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಡಿಜಿಪಿಗೆ ಮನವಿ ಸಲ್ಲಿಕೆ
ರಾಜ್ಯ ಸರ್ಕಾರದ ಒತ್ತಡಕ್ಕೆ ಮಣಿದು ಕೇವಲ ರಾಜಕೀಯ ಪ್ರೇರಿತವಾಗಿ ಬಿಜೆಪಿ ಕಾರ್ಯಕರ್ತರ ಮೇಲೆ ಬಿಎನ್‌ಎಸ್ (BNS) ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಕಾನೂನಿನಲ್ಲಿ ಇದಕ್ಕೆ ಯಾವುದೇ ಅವಕಾಶವಿಲ್ಲ. ಹೀಗಾಗಿ ತಕ್ಷಣವೇ ಇಂತಹ ಕಾನೂನುಬಾಹಿರ ಎಫ್‌ಐಆರ್ ದಾಖಲಿಸುವುದನ್ನು ನಿಲ್ಲಿಸಲು ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಎಂದು ಪೊಲೀಸ್ ಮಹಾನಿರ್ದೇಶಕರಿಗೆ ಒತ್ತಾಯಿಸಲಾಗಿದೆ ಎಂದು ಅವರು ತಿಳಿಸಿದರು.
ಠಾಣೆಗಳಿಗೆ ಮುತ್ತಿಗೆ ಹಾಕುವ ಎಚ್ಚರಿಕೆ
“ನಮ್ಮ ಕಾರ್ಯಕರ್ತರ ರಕ್ಷಣೆಗಾಗಿ ನಾವು ಕಾನೂನು ಮತ್ತು ರಾಜಕೀಯವಾಗಿ ಯಾವುದೇ ಹಂತದ ಹೋರಾಟಕ್ಕೂ ಸಿದ್ಧರಿದ್ದೇವೆ. ಸರ್ಕಾರ ಇಂತಹ ದಬ್ಬಾಳಿಕೆಯನ್ನು ಮುಂದುವರಿಸಿದರೆ ಮುಂಬರುವ ದಿನಗಳಲ್ಲಿ ಪೊಲೀಸ್ ಠಾಣೆಗಳಿಗೆ ಮುತ್ತಿಗೆ ಹಾಕಲಾಗುವುದು. ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂಬುದನ್ನು ಆಡಳಿತ ಪಕ್ಷ ನೆನಪಿನಲ್ಲಿಡಬೇಕು” ಎಂದು ವಿಜಯೇಂದ್ರ ಆಕ್ರೋಶ ಹೊರಹಾಕಿದರು.
ಫಾರಂ 7 ಪ್ರತಿಯೊಬ್ಬರ ಹಕ್ಕು
ಮತದಾರರ ಪಟ್ಟಿಯಲ್ಲಿರುವ ಅನಧಿಕೃತ ಅಥವಾ ಕಾನೂನುಬಾಹಿರ ಹೆಸರುಗಳನ್ನು ಕೈಬಿಡುವಂತೆ ಕೋರಿ ಅರ್ಜಿ ಸಲ್ಲಿಸಲು ಚುನಾವಣಾ ಆಯೋಗವು ‘ಫಾರಂ 7’ ರ ಮೂಲಕ ಎಲ್ಲ ರಾಜಕೀಯ ಪಕ್ಷಗಳು ಹಾಗೂ ನಾಗರಿಕರಿಗೆ ಹಕ್ಕು ನೀಡಿದೆ. ಸಲ್ಲಿಕೆಯಾದ ಅರ್ಜಿಯಲ್ಲಿ ತಪ್ಪುಗಳಿದ್ದರೆ ಅದನ್ನು ತಿರಸ್ಕರಿಸುವ ಅಧಿಕಾರ ಚುನಾವಣಾ ಅಧಿಕಾರಿಗಳಿಗೆ ಇದೆಯೇ ಹೊರತು, ಪೋಲೀಸ್ ಇಲಾಖೆಯನ್ನು ಬಳಸಿ ಕಾರ್ಯಕರ್ತರ ಮೇಲೆ ದಾದಾಗಿರಿ ನಡೆಸುವುದು ಸರಿಯಲ್ಲ ಎಂದು ಅವರು ಪ್ರತಿಪಾದಿಸಿದರು.
ಈ ನಿಯೋಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆಯ ವಿರೋಧ ಪಕ್ಷದ ನಾಯಕರು, ಸಂಸದರು, ಶಾಸಕರು ಹಾಗೂ ಪಕ್ಷದ ಹಿರಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

