ಬೆಂಗಳೂರು,ಮಾ,21,: ಲೋಕಸಭಾ ಚುನಾವಣೆಯಲ್ಲಿ ಇಂಡಿ ಮೈತ್ರಿಕೂಟ ಗೆದ್ದರೇ ಮೇಕೆದಾಟು ಡ್ಯಾಂಗೆ ಕಟ್ಟಲು ಬಿಡುವುದಿಲ್ಲ ಎಂದು ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಆರ್.ಅಶೋಕ್, ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಲು ಬಿಡುವುದಿಲ್ಲ ಎಂದು ತಮ್ಮ ಇಂಡಿ ಮಿತ್ರಪಕ್ಷ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆಯಲ್ಲ ಡಿಸಿಎಂ ಡಿಕೆ ಶಿವಕುಮಾರ್ ಅವರೇ, ಈಗ ‘ನಮ್ಮ ನೀರು, ನಮ್ಮ ಹಕ್ಕು’ ಎಂದು ತಮ್ಮ ಶಾಸಕರನ್ನು ಚೆನ್ನೈಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡುತ್ತೀರಾ ಅಥವಾ ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ರಾಜಿ ಮಾಡಿಕೊಳ್ಳುತ್ತೀರಾ? ಎಂದು ಡಿ.ಕೆ ಶಿವಕುಮಾರ್ ವಿರುದ್ದ ಗುಡುಗಿದ್ದಾರೆ.
ಬೆಂಗಳೂರಿಗೆ ನೀರು ತರುತ್ತೇವೆ ಎಂದು ಮೇಕೆದಾಟು ಪಾದಯಾತ್ರೆ ಮಾಡಿ ಕನ್ನಡಿಗರ ಮೂಗಿಗೆ ತುಪ್ಪ ಸವರಿ ಅಧಿಕಾರಕ್ಕೇರಿದ ನಾಡದ್ರೋಹಿ ಕಾಂಗ್ರೆಸ್ ಸರ್ಕಾರ ಈಗ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿದೆ ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.