ಬೆಂಗಳೂರು: ಬೆಂಗಳೂರು ನಗರದ ಸಂಚಾರ ನಿಯಂತ್ರಣ, ರಾಜ್ಯಾದ್ಯಂತ ವಾಹನಗಳ ಸಂಚಾರದ ಮೇಲ್ವಿಚಾರಣೆ ಹಾಗೂ ಅಪರಾಧ ಕೃತ್ಯಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಪೊಲೀಸ್ ಕಮಾಂಡ್ ಸೆಂಟರ್ ಅನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ನಗರದ ರಿಚ್‌ಮಂಡ್ ರಸ್ತೆಯಲ್ಲಿರುವ ಸೆಂಟ್ರಲ್ ಪೊಲೀಸ್ ಕಮಾಂಡ್ ಸೆಂಟರ್‌ಗೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,”ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಅತ್ಯಾಧುನಿಕ ತಂತ್ರಜ್ಞಾನದ ದೊಡ್ಡ ಪರದೆಗಳ ಮೂಲಕ ನಿಗಾವಹಿಸಲು ಈ ಕಮಾಂಡ್ ಸೆಂಟರ್ ನಿರ್ಮಿಸಲಾಗಿದೆ. ಇದಕ್ಕೆ ಅಗತ್ಯವಿರುವ ಹೆಚ್ಚಿನ ಆರ್ಥಿಕ ನೆರವು ನೀಡುವ ಕುರಿತು ಮುಂಬರುವ ದಿನಗಳಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಪೊಲೀಸ್ ಇಲಾಖೆಯಲ್ಲಿ ಸಮಗ್ರ ಸುಧಾರಣೆ ತರುವ ನಿಟ್ಟಿನಲ್ಲಿ ಈಗಾಗಲೇ ಹೊಸ ನೇಮಕಾತಿ ಪ್ರಕ್ರಿಯೆಗಳನ್ನು ಚುರುಕುಗೊಳಿಸಲಾಗಿದೆ” ಎಂದು ವಿವರಿಸಿದರು. ಇದೇ ವೇಳೆ, ಪೊಲೀಸ್ ಸಿಬ್ಬಂದಿಗೆ ಒಂದೇ ಸೂರಿನಡಿ ವಸತಿ ಸೌಕರ್ಯ ಕಲ್ಪಿಸುವ ಕುರಿತು ಗೃಹ ಸಚಿವರು ಮಾಹಿತಿ ನೀಡಿದ್ದು, ಈ ಬಗ್ಗೆಯೂ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದರು.
ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ:
ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಧೋರಣೆಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಡಿ.ಕೆ. ಶಿವಕುಮಾರ್, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರವು ಸಾರ್ವಜನಿಕರ ಹಾಗೂ ಪ್ರತಿಭಟನಾಕಾರರ ದನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ವಿರೋಧಿಸುವವರನ್ನು ಮತ್ತು ಮಾಧ್ಯಮಗಳನ್ನು ನಿಯಂತ್ರಿಸಲು ಯತ್ನಿಸುತ್ತಿದೆ” ಎಂದು ಗಂಭೀರ ಆರೋಪ ಮಾಡಿದರು

