ಬೆಂಗಳೂರು: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ (ಕೆಪಿಸಿಸಿ ಮಹಿಳಾ ಘಟಕ) ಅಧ್ಯಕ್ಷೆ ಹುದ್ದೆಗೆ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಭಾನುವಾರ ದಿಢೀರ್ ರಾಜೀನಾಮೆ ನೀಡಿದ್ದಾರೆ. ನವದೆಹಲಿಯಲ್ಲಿ ಅಖಿಲ ಭಾರತ ಮಹಿಳಾ ಕಾಂಗ್ರೆಸ್ (ಎಐಎಂಸಿ) ರಾಷ್ಟ್ರೀಯ ಅಧ್ಯಕ್ಷೆ ಅಲ್ಕಾ ಲಾಂಬಾ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.
ಸಂಪುಟದಲ್ಲಿ ಮಹಿಳೆಯರಿಲ್ಲದ್ದಕ್ಕೆ ಅಸಮಾಧಾನ:
ತಮ್ಮ ರಾಜೀನಾಮೆ ಪತ್ರದಲ್ಲಿ ರಾಜ್ಯ ರಾಜಕಾರಣದ ಪ್ರಮುಖ ವಿಚಾರವೊಂದನ್ನು ಪ್ರಸ್ತಾಪಿಸಿರುವ ಸೌಮ್ಯಾ ರೆಡ್ಡಿ, ಪ್ರಸ್ತುತ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಸಚಿವರು ಇಲ್ಲದಿರುವ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಅವರ ರಾಜೀನಾಮೆ ಬಳಿಕ ತೆರವಾದ ಸ್ಥಾನಕ್ಕೆ ಮತ್ತೊಬ್ಬ ಮಹಿಳಾ ಶಾಸಕರಿಗೆ ಪ್ರಾತಿನಿಧ್ಯ ನೀಡದಿರುವುದು ಸ್ತ್ರೀ ಸಂಕುಲಕ್ಕೆ ಮಾಡಿದ ಅನ್ಯಾಯ ಎಂದು ಅವರು ಪರೋಕ್ಷವಾಗಿ ಹೈಕಮಾಂಡ್ ಗಮನಕ್ಕೆ ತಂದಿದ್ದಾರೆ.
ಹೊಸಬರಿಗೆ ಅವಕಾಶ ನೀಡಲು ತೀರ್ಮಾನ:
“ನಾನು ಮಹಿಳಾ ಘಟಕದ ಅಧ್ಯಕ್ಷೆಯಾಗಿ ಜವಾಬ್ದಾರಿ ವಹಿಸಿಕೊಂಡಾಗ ಕೇವಲ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸುವುದಾಗಿ ಒಪ್ಪಿಕೊಂಡಿದ್ದೆ. ಪ್ರಸ್ತುತ ನನ್ನ ಅವಧಿ ಪೂರ್ಣಗೊಂಡಿದ್ದು, ಸಂಘಟನೆಯಲ್ಲಿ ಹೊಸಬರಿಗೆ ಮತ್ತು ಯುವ ಮುಖಗಳಿಗೆ ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದೇನೆ” ಎಂದು ಸೌಮ್ಯಾ ರೆಡ್ಡಿ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ. ಆದರೆ, ಪಕ್ಷವು ಹೊಸ ಅಧ್ಯಕ್ಷರ ಹೆಸರನ್ನು ಅಧಿಕೃತವಾಗಿ ಪ್ರಕಟಿಸುವವರೆಗೂ ಹಂಗಾಮಿಯಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ.
ತಮ್ಮ ಅವಧಿಯಲ್ಲಿ ರಾಜ್ಯದ ಮೂಲೆ ಮೂಲೆಗೂ ಪ್ರವಾಸ ಮಾಡಿ ಮಹಿಳೆಯರ ರಾಜಕೀಯ ಸಬಲೀಕರಣ, ಆರ್ಥಿಕ ಸ್ವಾವಲಂಬನೆ ಮತ್ತು ಆರೋಗ್ಯ ರಕ್ಷಣೆಗಾಗಿ ಪ್ರಾಮಾಣಿಕವಾಗಿ ಶ್ರಮಿಸಿರುವ ತೃಪ್ತಿ ನನಗಿದೆ ಎಂದಿರುವ ಅವರು, ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಗೆಲ್ಲಿಸಲು ಸಾಮಾನ್ಯ ಕಾರ್ಯಕರ್ತೆಯಾಗಿ ದುಡಿಯುವುದಾಗಿ ಹೇಳಿದ್ದಾರೆ. ಸೌಮ್ಯಾ ರೆಡ್ಡಿ ಅವರ ಈ ದಿಢೀರ್ ನಡೆ ಸದ್ಯ ಆಡಳಿತಾರೂಢ ಕಾಂಗ್ರೆಸ್ ಪಾಳಯದಲ್ಲಿ ಭಾರಿ ಸಂಚಲನ ಮೂಡಿಸಿದೆ.

