ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಅತ್ಯಾಧುನಿಕ ‘ನಿರ್ಮಾಣ ಮತ್ತು ಮೂಲಸೌಕರ್ಯ ಉಪಕರಣಗಳ ಪರೀಕ್ಷಾ ಕೇಂದ್ರ’ (CIE) ಹಾಗೂ ‘ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ’ (EV) ಸ್ಥಾಪಿಸಲು ಕರ್ನಾಟಕ ಸರ್ಕಾರದಿಂದ ಭೂಮಿ ಮಂಜೂರಾತಿಯಲ್ಲಿ ವಿಳಂಬವಾಗುತ್ತಿರುವುದಕ್ಕೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು ಮುಖ್ಯಮಂತ್ರಿಗಳಿಗೆ ಅಧಿಕೃತ ಪತ್ರ ಬರೆದಿದ್ದಾರೆ.
ಕಳೆದ ಹತ್ತು ತಿಂಗಳಿನಿಂದ ಈ ಯೋಜನೆಗೆ ಜಮೀನು ನೀಡಲು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಮುಖ್ಯಮಂತ್ರಿ ಕಚೇರಿಗೆ ಪತ್ರ ರವಾನಿಸಿರುವ ಕೇಂದ್ರ ಸಚಿವರು, ಈವರೆಗೆ ಉಭಯ ಸರ್ಕಾರಗಳ ನಡುವೆ ನಡೆದಿರುವ ಸಭೆಗಳ ವಿವರಗಳು, ಪತ್ರ ವ್ಯವಹಾರಗಳು ಹಾಗೂ ಮಹತ್ವದ ದಾಖಲೆಗಳನ್ನು ಒದಗಿಸಿದ್ದಾರೆ. ಅಲ್ಲದೆ, ಮಂಡ್ಯದಲ್ಲಿ ಎಆರ್‌ಎಐ (ARAI) ಕೇಂದ್ರದ ಜಮೀನು ಮಂಜೂರಾತಿ ಕುರಿತು ಈ ಹಿಂದೆ ಮುಖ್ಯಮಂತ್ರಿಯವರು ನೀಡಿದ್ದ ಹೇಳಿಕೆಗಳ ಪತ್ರಿಕಾ ತುಣುಕುಗಳನ್ನೂ ಪತ್ರದೊಂದಿಗೆ ಲಗತ್ತಿಸಿದ್ದಾರೆ.
ವಿಧಾನಸೌಧದಲ್ಲಿ ಪತ್ರ ಹಸ್ತಾಂತರ:
ಕೇಂದ್ರ ಸಚಿವರ ಆಪ್ತರು ವಿಧಾನಸೌಧಕ್ಕೆ ತೆರಳಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್ ಅವರಿಗೆ ಈ ಮಹತ್ವದ ಪತ್ರವನ್ನು ಹಸ್ತಾಂತರಿಸಿದ್ದಾರೆ. ಪತ್ರ ತಲುಪಿದ ಬೆನ್ನಲ್ಲೇ ಹೆಚ್.ಡಿ. ಕುಮಾರಸ್ವಾಮಿ ಅವರು ತುಷಾರ್ ಗಿರಿನಾಥ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯದ ಕೈಗಾರಿಕಾ ಪ್ರಗತಿ ಹಾಗೂ ಉದ್ಯೋಗ ಸೃಷ್ಟಿಯ ದೃಷ್ಟಿಯಿಂದ ಮಹತ್ವದ್ದಾಗಿರುವ ಈ ಯೋಜನೆಯ ಭೂ ಮಂಜೂರಾತಿ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಕೇಂದ್ರ ಸಚಿವರು ಪತ್ರದ ಮೂಲಕ ಮನವಿ ಮಾಡಿದ್ದಾರೆ.

