ಬೆಂಗಳೂರು.ಮಾ.22: ಲೋಕಸಭಾ ಚುನಾವಣೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಜೆಡಿಎಸ್ ರಾಜಿನಾಮೆ ನೀಡುವ ಮೂಲಕ ಪರಿಷತ್ ಸದಸ್ಯ ಮರಿತಿಬ್ಬೇ ಗೌಡ ಅವರು ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಮತ್ತು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.
ಬಿಜೆಪಿ ಜತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದರಿಂದ ಆಕ್ರೋಶಗೊಂಡು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ತೊರೆದ ಮರಿತಿಬ್ಬೇಗೌಡ ಅವರು ತಮ್ಮ ಅಪಾರ ಅಭಿಮಾನಿಗಳ ಜತೆ ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರ ಜತೆಗೆ ಮಳವಳ್ಳಿ, ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಮತ್ತು ನಾನಾ ಮೋರ್ಚಾಗಳ ಕಾರ್ತಕರ್ತರನ್ನು ಕಾಂಗ್ರೆಸ್ ಗೆ ಬರಮಾಡಿಕೊಳ್ಳಲಾಯಿತು.
ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ, ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಎಂ.ಶ್ರೀನಿವಾಸ್ ವಿಧಾನಸಭೆಯಲ್ಲಿ ತಮ್ಮೊಂದಿಗೆ ಕೆಲಸ ಮಾಡಿದ್ದರು. ಅನಾರೋಗ್ಯದಿಂದ ಆಸ್ಪತ್ರೆಯಲ್ಲಿದ್ದಾರೆ. ಹೀಗಾಗಿ ಕಾರ್ಯಕ್ರಮಕ್ಕೆ ಬಂದಿಲ್ಲ. ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದು ಪತ್ರ ಕಳುಹಿಸಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಅವರನ್ನೂ ಸೇರಿಸಿಕೊಳ್ಳಲಾಗಿದೆ. ಅವರ ಬೆಂಬಲಿಗರು, ಅಳಿಯ ಹಾಗೂ ಇತರರು ಇಂದು ಕಾಂಗ್ರೆಸ್ ಸೇರಿದ್ದಾರೆ ಎಂದು ಹೇಳಿದರು.