Sun. Nov 1st, 2026

1995ರ ನಂತರದ ಕನ್ನಡ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಿ: ರಾಜ್ಯೋತ್ಸವ ವೇದಿಕೆಯಲ್ಲೇ ಸಚಿವ ಮಧು ಬಂಗಾರಪ್ಪ ಸಿಎಂಗೆ ಮನವಿ

Share this with Friends

ಬೆಂಗಳೂರು: “ಕನ್ನಡಿಗರ ಪಾಲಿಗೆ ನವೆಂಬರ್ 1 ಕೇವಲ ದಿನಾಂಕವಲ್ಲ, ಅದು ನಮ್ಮ ಭಾಷೆಯ ಅಸ್ತಿತ್ವ ಮತ್ತು ಸ್ವಾಭಿಮಾನದ ಸಂಕೇತ” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಆಯೋಜಿಸಿದ್ದ 71ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಮಾತನಾಡಿದರು.

ಕನ್ನಡ ಶಾಲೆಗಳ ಅನುದಾನಕ್ಕೆ ಮನವಿ

ರಾಜ್ಯದಲ್ಲಿ ಕನ್ನಡ ಭಾಷೆ ಮತ್ತು ಕನ್ನಡ ಶಾಲೆಗಳ ಉಳಿವಿಗಾಗಿ ಸರ್ಕಾರ ಬದ್ಧವಾಗಿದೆ ಎಂದ ಸಚಿವರು, 1995ರ ನಂತರ ಆರಂಭವಾದ ಕನ್ನಡ ಮಾಧ್ಯಮ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿಗಳಿಗೆ ವೇದಿಕೆಯಲ್ಲೇ ವಿಶೇಷ ಮನವಿ ಸಲ್ಲಿಸಿದರು. ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಈ ಐತಿಹಾಸಿಕ ನಿರ್ಧಾರ ಪ್ರಕಟಿಸಿದರೆ ಅದು ಇತಿಹಾಸ ಸೃಷ್ಟಿಸಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು.

32 ಸಾವಿರ ಶಿಕ್ಷಕರ ನೇಮಕಾತಿ ಗುರಿ

ರಾಜ್ಯದ 1.16 ಕೋಟಿ ಮಕ್ಕಳ ಭವಿಷ್ಯ ರೂಪಿಸುವ ಹೊಣೆಗಾರಿಕೆ ಶಿಕ್ಷಣ ಇಲಾಖೆಯ ಮೇಲಿದೆ ಎಂದ ಅವರು, ಗುಣಮಟ್ಟದ ಶಿಕ್ಷಣಕ್ಕಾಗಿ ಶಿಕ್ಷಕರ ಕೊರತೆ ನೀಗಿಸಲು ಸರ್ಕಾರ ಆದ್ಯತೆ ನೀಡಿದೆ ಎಂದರು. ಪ್ರಸ್ತುತ 17 ಸಾವಿರಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಇದು ಪೂರ್ಣಗೊಂಡರೆ ಈ ಸರ್ಕಾರದ ಅವಧಿಯಲ್ಲಿ ಒಟ್ಟು 32 ಸಾವಿರ ಶಿಕ್ಷಕರನ್ನು ನೇಮಕ ಮಾಡಿದಂತಾಗುತ್ತದೆ ಎಂದು ಅಂಕಿ-ಅಂಶ ನೀಡಿದರು.

ಗ್ರಾಮೀಣ ಮಕ್ಕಳಿಗೆ ಶೇ.7.5ರಷ್ಟು ಮೀಸಲಾತಿ

ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಒಂದರಿಂದ ಹತ್ತನೇ ತರಗತಿವರೆಗೆ ಓದಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅವಕಾಶಗಳನ್ನು ವಿಸ್ತರಿಸಲು ಸರ್ಕಾರ ‘ವಿದ್ಯಾರ್ಥಿ ಸಹಾಯಹಸ್ತ’ ಯೋಜನೆ ಜಾರಿಗೆ ತಂದಿದೆ. ಇದರ ಅಡಿಯಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಶೇ. 7.5 ರಷ್ಟು ವಿಶೇಷ ಮೀಸಲಾತಿ ಕಲ್ಪಿಸಲಾಗಿದೆ. ಇದರೊಂದಿಗೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ರಾಜ್ಯದಾದ್ಯಂತ 1,200ಕ್ಕೂ ಹೆಚ್ಚು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಸ್ಥಾಪಿಸಲಾಗುತ್ತಿದೆ ಎಂದು ವಿವರಿಸಿದರು.

ವಿನೂತನ ‘ಗ್ರಾಮಾನುಭವ’ ಯೋಜನೆ

ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಕೃಷಿ ಪದ್ಧತಿ, ಗ್ರಾಮೀಣ ಸಂಸ್ಕೃತಿ ಹಾಗೂ ಶ್ರಮಜೀವನದ ನೈಜ ಪರಿಚಯ ಮಾಡಿಕೊಡುವ ಉದ್ದೇಶದಿಂದ ‘ಗ್ರಾಮಾನುಭವ’ ಎಂಬ ವಿನೂತನ ಶೈಕ್ಷಣಿಕ ಕಾರ್ಯಕ್ರಮ ರೂಪಿಸಲಾಗಿದೆ. ಈ ಯೋಜನೆಯಡಿ 8, 9 ಮತ್ತು 11ನೇ ತರಗತಿಯ ನಗರದ ವಿದ್ಯಾರ್ಥಿಗಳು ಹಳ್ಳಿಗಳಿಗೆ ಭೇಟಿ ನೀಡಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಗ್ರಾಮೀಣ ಬದುಕಿನ ಪ್ರಾಯೋಗಿಕ ಅನುಭವ ಪಡೆಯಲಿದ್ದಾರೆ ಎಂದರು.

ಹೆಸರಿನ ಮುಂದೆ ‘Tr’ ಗೌರವ

ಶಿಕ್ಷಕರ ಅಮೂಲ್ಯ ಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜ್ಯದ ಎಲ್ಲಾ ಶಿಕ್ಷಕರು ತಮ್ಮ ಹೆಸರಿನ ಹಿಂದೆ ಹೆಮ್ಮೆಯಿಂದ ‘Tr.’ (Teacher) ಎಂದು ಬಳಸಲು ಅನುಮತಿ ನೀಡಿ ಆದೇಶ ಹೊರಡಿಸಿದೆ. ಕನ್ನಡ ನಮ್ಮ ಉಸಿರಾಗಬೇಕು ಮತ್ತು ಆಡಳಿತದ ಪ್ರತಿಯೊಂದು ಹಂತದಲ್ಲೂ ಕನ್ನಡಕ್ಕೆ ಮೊದಲ ಆದ್ಯತೆ ಸಿಗಬೇಕು ಎಂದು ಸಚಿವರು ಕರೆ ನೀಡಿದರು.

 


Share this with Friends

Related Post