ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮ್ಮ ಹೇಳಿಕೆಗೆ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ. “ನಾನು ಉದ್ದೇಶಪೂರ್ವಕವಾಗಿ ಆ ಪದಗಳನ್ನು ಬಳಸಿಲ್ಲ, ನನ್ನ ಹೇಳಿಕೆಯಿಂದ ಕಾಂಗ್ರೆಸ್ ನಾಯಕರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇತ್ತೀಚೆಗೆ ರಾಜಕೀಯ ವಿಷಯವೊಂದರ ಕುರಿತು ಮಾತನಾಡುವಾಗ ವಿಜಯೇಂದ್ರ ಅವರು ಕಾಂಗ್ರೆಸ್ ನಾಯಕರನ್ನು ಏಕವಚನದಲ್ಲಿ ನಿಂದಿಸಿದ್ದರು ಎನ್ನಲಾಗಿದೆ. ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ತಡರಾತ್ರಿ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ನಿವಾಸದ ಕಾಂಪೌಂಡ್ಗೆ ವಿಜಯೇಂದ್ರ ವಿರುದ್ಧ ಆಕ್ರೋಶದ ಪೋಸ್ಟರ್ಗಳನ್ನು ಅಂಟಿಸಿ ಪ್ರತಿಭಟಿಸಿದ್ದರು.
ಕಾಂಪೌಂಡ್ ಗೋಡೆಗಳ ಮೇಲೆ ‘ಹೇಡಿ ವಿಜಯೇಂದ್ರ’, ‘ಆರ್ಟಿಜಿಎಸ್ ಕೇಡಿ’ ಎಂದು ಬರೆಯಲಾಗಿದ್ದ ಪೋಸ್ಟರ್ಗಳು ರಾರಾಜಿಸಿದ್ದವು. ಈ ಪೋಸ್ಟರ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತ ಬಿಜೆಪಿ ರಾಜ್ಯಾಧ್ಯಕ್ಷರು, ರಾಜಕೀಯ ಸಂಘರ್ಷಕ್ಕೆ ಆಸ್ಪದ ನೀಡದೆ ತಕ್ಷಣವೇ ಮಾಧ್ಯಮಗಳ ಮುಂದೆ ಬಂದು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿ ವಿವಾದಕ್ಕೆ ತೆರೆ ಎಳೆದಿದ್ದಾರೆ.

