ಮೈಸೂರು: ಜಿಲ್ಲೆಯ ಕೃಷ್ಣರಾಜನಗರ (ಕೆ.ಆರ್.ನಗರ) ಪಟ್ಟಣದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭದಲ್ಲಿ ಗರ್ಭಿಣಿ ಹಾಗೂ ಶಿಶು ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ. ಈ ಅತ್ಯಂತ ನೋವಿನ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀಬಾಯಿ ಅವರು, ಪ್ರಕರಣದ ಕುರಿತು ಸಂಪೂರ್ಣ ಮಾಹಿತಿ ಪಡೆದು ಸಮಗ್ರ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಆರೋಗ್ಯ ಇಲಾಖೆಯ ಉನ್ನತಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೆ.ಆರ್.ನಗರ ತಾಲೂಕಿನ ಮಳಲಿ ಗ್ರಾಮದ ಮಹೇಶ್ ಅವರ ಪತ್ನಿ ಸುಶ್ಮಿತಾ (26) ಹೆರಿಗೆಗಾಗಿ ಸೋಮವಾರ ರಾತ್ರಿ ಇಲ್ಲಿನ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮಂಗಳವಾರ ಬೆಳಿಗ್ಗೆ ಹೆರಿಗೆ ಪ್ರಕ್ರಿಯೆ ನಡೆಯುತ್ತಿದ್ದ ಸಂದರ್ಭದಲ್ಲಿ ತಾಯಿ ಹಾಗೂ ಹೊಟ್ಟೆಯಲ್ಲಿದ್ದ ಮಗು ಇಬ್ಬರೂ ಕೊನೆಯುಸಿರೆಳೆದಿದ್ದಾರೆ. ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿಯ ಬೇಜವಾಬ್ದಾರಿತನ ಹಾಗೂ ಚಿಕಿತ್ಸಾ ವಿಳಂಬವೇ ಈ ದಾರುಣ ಸಾವಿಗೆ ಕಾರಣ ಎಂದು ಆರೋಪಿಸಿರುವ ಮೃತರ ಕುಟುಂಬಸ್ಥರು ಮತ್ತು ಸಂಬಂಧಿಕರು ಆಸ್ಪತ್ರೆ ಎದುರು ಕಣ್ಣೀರಿಡುತ್ತಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಸ್ಥಳೀಯ ಶಾಸಕ ಡಿ. ರವಿಶಂಕರ್ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಕ್ರೋಶಗೊಂಡಿದ್ದ ಕುಟುಂಬದವರನ್ನು ಸಮಾಧಾನಪಡಿಸಿದ್ದಾರೆ.
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ:
ಘಟನೆಯ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀಬಾಯಿ ಅವರು, “ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭದಲ್ಲಿ ತಾಯಿ ಮತ್ತು ಮಗು ಮೃತಪಟ್ಟಿರುವುದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಸಂಗತಿಯಾಗಿದೆ. ಈ ತಾಯಿ-ಮಗುವಿನ ಸಾವಿಗೆ ನಿಖರ ಕಾರಣವೇನು ಹಾಗೂ ವೈದ್ಯಕೀಯ ಸಿಬ್ಬಂದಿಯ ಕರ್ತವ್ಯ ನಿರ್ವಹಣೆಯಲ್ಲಿ ಯಾವುದೇ ರೀತಿಯ ಲೋಪವಾಗಿದೆಯೇ ಎಂಬುದನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುವುದು. ಒಂದು ವೇಳೆ ತನಿಖೆಯಲ್ಲಿ ಯಾರದೇ ನಿರ್ಲಕ್ಷ್ಯ ಅಥವಾ ಲೋಪ ಕಂಡುಬಂದಲ್ಲಿ, ಅವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಸೂಕ್ತ ಮತ್ತು ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು,” ಎಂದು ಸ್ಪಷ್ಟಪಡಿಸಿದ್ದಾರೆ.
ಈ ದುರಂತದ ಹಿನ್ನೆಲೆಯಲ್ಲಿ ಇಲಾಖೆಯ ವೈದ್ಯಕೀಯ ಮಂಡಳಿ ಹಾಗೂ ಪೊಲೀಸರು ತನಿಖೆ ಆರಂಭಿಸಿದ್ದು, ಸಾವಿನ ನೈಜ ಕಾರಣ ಪತ್ತೆಹಚ್ಚಲು ಮುಂದಾಗಿದ್ದಾರೆ.

