Sat. Nov 7th, 2026

ಸರ್ಕಾರಿ ಶಾಲೆಗಳ ಬಲವರ್ಧನೆಗೆ ಆದ್ಯತೆ ನೀಡಿ: ಸಚಿವ ಮಧು ಬಂಗಾರಪ್ಪ

Share this with Friends

ಚಿಕ್ಕಮಗಳೂರು: ಸರ್ಕಾರಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಸಮಗ್ರ ಅಭಿವೃದ್ಧಿ, ಮಕ್ಕಳ ದಾಖಲಾತಿ ಹೆಚ್ಚಳ ಮತ್ತು ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಚಿಕ್ಕಮಗಳೂರಿನ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶನಿವಾರ ನಡೆದ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳನ್ನು ಮತ್ತಷ್ಟು ಬಲಪಡಿಸುವುದು ಸರ್ಕಾರದ ಮುಖ್ಯ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದರು.

‘ನಮ್ಮ ಶಾಲೆ – ನಮ್ಮ ಜವಾಬ್ದಾರಿ’ಗೆ ಒತ್ತು:

ಇಲಾಖೆಯ ಬಹುಮುಖ್ಯ ಉಪಕ್ರಮವಾದ ʻನಮ್ಮ ಶಾಲೆ – ನಮ್ಮ ಜವಾಬ್ದಾರಿʼ ಯೋಜನೆಯಡಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಹಳೆ ವಿದ್ಯಾರ್ಥಿಗಳ ಹಾಗೂ ದಾನಿಗಳ ಸಹಕಾರದೊಂದಿಗೆ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಮುಂದಾಗಬೇಕು. ಶಾಲೆಗಳ ಉನ್ನತೀಕರಣಕ್ಕೆ ಕೊಡುಗೆ ನೀಡುವ ದಾನಿಗಳನ್ನು ಗುರುತಿಸಿ ಸನ್ಮಾನಿಸುವ ಮೂಲಕ ಇತರರಿಗೂ ಪ್ರೇರಣೆ ನೀಡಬೇಕು ಎಂದು ಸಚಿವರು ತಿಳಿಸಿದರು.

ಮೂಲಸೌಕರ್ಯ ಮತ್ತು ತರಬೇತಿ:

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವುದು, ಪೂರ್ವ ಪ್ರಾಥಮಿಕ ವಿಭಾಗಗಳನ್ನು ಆರಂಭಿಸುವುದು, ಶಿಕ್ಷಕರಿಗೆ ಕಾಲಕಾಲಕ್ಕೆ ತರಬೇತಿ ನೀಡುವುದು ಹಾಗೂ ಶಾಲೆಗಳಿಗೆ ಗೈರುಹಾಜರಾಗುವ ಮಕ್ಕಳನ್ನು ಮರಳಿ ಕರೆತರುವ ನಿಟ್ಟಿನಲ್ಲಿ ವಿಶೇಷ ಗಮನಹರಿಸಬೇಕು. ಅಗತ್ಯವಿರುವ ಕಡೆ ಆಂಗ್ಲ ಮಾಧ್ಯಮ ವಿಭಾಗಗಳನ್ನು ಆರಂಭಿಸುವುದು ಮತ್ತು ಆಯ್ದ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಬೇಕು. ಶಿಕ್ಷಕರ ಕೊರತೆ ನೀಗಿಸಲು ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ವಹಿಸುವುದರ ಜತೆಗೆ, ಅಗತ್ಯವಿರುವ ಕಡೆ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಬೇಕು. ಶಾಲಾ ಕೊಠಡಿಗಳ ದುರಸ್ತಿ, ಶೌಚಾಲಯ ನಿರ್ಮಾಣ ಸೇರಿದಂತೆ ಮೂಲಸೌಕರ್ಯ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ಸಕಾಲಕ್ಕೆ ಸೌಲಭ್ಯ ವಿತರಣೆ:

ಶಾಲಾ ಪ್ರಾರಂಭದ ವೇಳೆಯಲ್ಲಿಯೇ ಎಲ್ಲ ಮಕ್ಕಳಿಗೂ ಪಠ್ಯಪುಸ್ತಕ, ಸಮವಸ್ತ್ರ ಹಾಗೂ ಶೂ ಮತ್ತು ಸಾಕ್ಸ್‌ಗಳನ್ನು ಏಕಕಾಲದಲ್ಲಿ ವಿತರಿಸಬೇಕು. ಯಾವುದೇ ಮಗು ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಪಿಎಂಶ್ರೀ ಶಾಲೆಗಳ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಬೇಕು. ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಗುಣಮಟ್ಟದ ಆಹಾರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ:

ಮಕ್ಕಳಲ್ಲಿ ಉತ್ತಮ ನಡತೆ ಬೆಳೆಸಲು ಮೌಲ್ಯಶಿಕ್ಷಣಕ್ಕೆ ಒತ್ತು ನೀಡಬೇಕು. ‘ಮೊಬೈಲ್ ಬಿಡಿ, ಪುಸ್ತಕ ಹಿಡಿ’ ಕಾರ್ಯಕ್ರಮದ ಮೂಲಕ ಓದುವ ಹವ್ಯಾಸ ಬೆಳೆಸಬೇಕು. ಪೋಷಕರು ಮತ್ತು ಶಿಕ್ಷಕರ ಸಭೆಗಳನ್ನು ನಿಯಮಿತವಾಗಿ ನಡೆಸಿ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ವಿಶೇಷ ತರಬೇತಿ ನೀಡಬೇಕು. ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಉತ್ತಮ ಸಾಧನೆ ಮಾಡುವಂತಾಗಲು ಸಿಇಟಿ, ನೀಟ್ ಹಾಗೂ ಜೆಇಇ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಸೂಕ್ತ ತರಬೇತಿ ವ್ಯವಸ್ಥೆ ರೂಪಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಶಾಸಕರಾದ ಎಚ್.ಡಿ. ತಮ್ಮಯ್ಯ, ಟಿ.ಡಿ. ರಾಜೇಗೌಡ, ಜಿ.ಎಚ್. ಶ್ರೀನಿವಾಸ್, ವಿಧಾನಪರಿಷತ್ ಸದಸ್ಯರಾದ ಗಾಯತ್ರಿ ಶಾಂತೇಗೌಡ, ಎಸ್.ಎಲ್. ಭೋಜೇಗೌಡ, ಜಿಲ್ಲಾ ಪಂಚಾಯಿತಿ ಸಿಇಒ ಮೀನಾಕ್ಷಿ ಆರ್ಯ, ಡಿಡಿಪಿಐ ತಿಮ್ಮರಾಜು, ಡಿಡಿಪಿಯು ಮಂಜುಳಾ ಸೇರಿದಂತೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

 


Share this with Friends

Related Post