ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಗೆ ವಿಮಾನ ಸಂಪರ್ಕವನ್ನು ನಿರಂತರವಾಗಿ ಮುಂದುವರಿಸಲು ರಾಜ್ಯ ಸರ್ಕಾರವು ತಕ್ಷಣವೇ ‘ವೈಯಬಿಲಿಟಿ ಗ್ಯಾಪ್ ಫಂಡಿಂಗ್’ (VGF) ಅಡಿಯಲ್ಲಿ ಆರ್ಥಿಕ ನೆರವು ನೀಡಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಆಗ್ರಹಿಸಿದ್ದಾರೆ.
ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ತುರ್ತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,ಈಗಾಗಲೇ ರಾಜ್ಯ ಸರ್ಕಾರವು ಕಲಬುರಗಿ ಮತ್ತು ಬೀದರ್ ವಿಮಾನ ನಿಲ್ದಾಣಗಳ ವಿಮಾನ ಸೇವೆ ಮುಂದುವರಿಕೆಗೆ ಅಗತ್ಯ ಧನಸಹಾಯ ನೀಡುತ್ತಿದೆ. ಅದೇ ಮಾದರಿಯಲ್ಲಿ ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದಲೂ ಈ ನೆರವು ವಿಸ್ತರಣೆಯಾಗಬೇಕು. ಉಡಾನ್ ಯೋಜನೆಯಡಿ ಆರಂಭವಾಗಿರುವ ಈ ವಿಮಾನ ಸೇವೆಗಳು ಸ್ಥಗಿತಗೊಳ್ಳದಂತೆ ತಡೆಯಲು ಸರ್ಕಾರದ ತಕ್ಷಣದ ಹಸ್ತಕ್ಷೇಪ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು.
ಇದೇ ಸಂದರ್ಭದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಂಸದರು, ಸತತ ರಾಜಕೀಯ ಹಿನ್ನಡೆಗಳಿಂದ ಕಂಗೆಟ್ಟಿರುವ ಕಾಂಗ್ರೆಸ್ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿದರು. ಇತ್ತೀಚಿನ ಪೋಸ್ಟರ್ ವಾರ್‌ಗಳು ಹಾಗೂ ರಾಜಕೀಯ ಬೆಳವಣಿಗೆಗಳು ಇದಕ್ಕೆ ಸಾಕ್ಷಿಯಾಗಿದ್ದು, ಪ್ರಜಾಪ್ರಭುತ್ವ ಮತ್ತು ಸಂವಿಧಾನಬದ್ಧ ಸಂಸ್ಥೆಗಳ ರಕ್ಷಣೆಗಾಗಿ ಸಾರ್ವಜನಿಕರು ಇಂತಹ ಪ್ರವೃತ್ತಿಗಳ ವಿರುದ್ಧ ಧ್ವನಿ ಎತ್ತಬೇಕಿದೆ ಎಂದು ಕರೆ ನೀಡಿದರು.

