ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋ ಗುಲಾಬಿ ಮಾರ್ಗದ (Pink Line) ಉದ್ಘಾಟನಾ ಸಮಾರಂಭದಲ್ಲಿ ತಮಗೆ ಮಾತನಾಡಲು ಅವಕಾಶ ನಿರಾಕರಿಸಿರುವುದಕ್ಕೆ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಕರ್ನಾಟಕ ರಾಜ್ಯಕ್ಕೆ ನ್ಯಾಯಯುತ ಪಾಲು ಕೇಳಿದ್ದಕ್ಕೆ ತಮಗೆ ಈ ರೀತಿಯ ಶಿಕ್ಷೆ ನೀಡಲಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಅಂತಿಮ ಪಟ್ಟಿಯಲ್ಲಿ ಹೆಸರು ಕೈಬಿಡಲಾಗಿದೆ:
ಸಭಾ ಕಾರ್ಯಕ್ರಮದ ಆರಂಭಿಕ ಕರಡು ಪಟ್ಟಿಯಲ್ಲಿ (ಡ್ರಾಫ್ಟ್) ಬೆಂಗಳೂರು ಅಭಿವೃದ್ಧಿ ಸಚಿವರ ಭಾಷಣಕ್ಕೆ ಅವಕಾಶ ನಿಗದಿಯಾಗಿತ್ತು. ಆದರೆ ಬುಧವಾರ ರಾತ್ರಿ ಬಿಡುಗಡೆಯಾದ ಅಂತಿಮ ಪಟ್ಟಿಯಲ್ಲಿ ತಮ್ಮ ಭಾಷಣವನ್ನು ಕೈಬಿಡಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರವೇ ಬಹುತೇಕ ಬಂಡವಾಳವನ್ನು ಖರ್ಚು ಮಾಡುತ್ತಿದೆ. ಹೀಗಿದ್ದರೂ ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕಾಗಿ ಉದ್ಘಾಟನಾ ವೇದಿಕೆಯಲ್ಲಿ ಮಾತನಾಡುವ ಅವಕಾಶವನ್ನೇ ಕಸಿದುಕೊಳ್ಳಲಾಗಿದೆ ಎಂದು ಅವರು ಟೀಕಿಸಿದ್ದಾರೆ.
ಅಭಿವೃದ್ಧಿ ಕೆಲಸ ನಿಲ್ಲಿಸಲು ಸಾಧ್ಯವಿಲ್ಲ:
ವೇದಿಕೆಯಲ್ಲಿ ತಮ್ಮ ಮಾತನ್ನು ಕಟ್ ಮಾಡಬಹುದು, ಆದರೆ ಬೆಂಗಳೂರಿನ ಅಭಿವೃದ್ಧಿಗಾಗಿ ತಾವು ಮಾಡುವ ಕೆಲಸವನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ ಎಂದು ಸಚಿವರು ತಿರುಗೇಟು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪರಿಶ್ರಮದಿಂದ ನಗರದ ಅಭಿವೃದ್ಧಿಗೆ ಶ್ರಮಿಸುವುದಾಗಿ ಅವರು ತಿಳಿಸಿದ್ದಾರೆ.

