Mon. Nov 16th, 2026

ಶಾಲಾ ಆವರಣದಲ್ಲಿ ರಾಜಕೀಯ ಭಾಷಣ: ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಸೂಚನೆ

Share this with Friends

ಬೆಂಗಳೂರು: ಶಾಲಾ ವಿದ್ಯಾರ್ಥಿಗಳ ಸಮ್ಮುಖದಲ್ಲಿ ದ್ವೇಷಪೂರಿತ ಹಾಗೂ ಅಸಂವಿಧಾನಿಕ ಭಾಷೆ ಬಳಸಿರುವ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಶಾಲೆಯ (ಕೆಪಿಎಸ್) ನೂತನ ಸಭಾಂಗಣ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಶಾಸಕ ಪೂಂಜಾ, ವಿದ್ಯಾರ್ಥಿಗಳ ಮುಂದೆಯೇ ಕಾಂಗ್ರೆಸ್ ಪಕ್ಷದ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ರಾಜಕೀಯ ಭಾಷಣ ಮಾಡಿದ್ದರು. ಈ ಕುರಿತು ಬೆಂಗಳೂರಿನಲ್ಲಿ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ದೂರುಗಳಿಗಾಗಿ ಕಾಯದೆ ಕ್ರಮ:

“ಜನಪ್ರತಿನಿಧಿಯಾಗಿ ಹೇಗೆ ನಡೆದುಕೊಳ್ಳಬೇಕು ಎಂಬ ಕನಿಷ್ಠ ಸಾಮಾನ್ಯ ಜ್ಞಾನವೂ ಇಲ್ಲದೆ ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಶಾಲೆಗಳು ದೇವಾಲಯಗಳಿದ್ದಂತೆ, ಅಲ್ಲಿ ರಾಜಕೀಯಕ್ಕೆ ಅವಕಾಶ ನೀಡಬಾರದು. ಘಟನೆಯ ಕುರಿತು ಸಂಪೂರ್ಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದೇನೆ. ಸಾರ್ವಜನಿಕರು ದೂರು ನೀಡಿದರೆ ಸ್ವಾಗತ, ಆದರೆ ದೂರುಗಳಿಗಾಗಿ ಕಾಯದೆ ಇಲಾಖೆಯಿಂದಲೇ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಅವರು ಕ್ಷಮೆ ಕೇಳುತ್ತಾರೋ ಇಲ್ಲವೋ ಎಂಬುದು ಇಲ್ಲಿ ಮುಖ್ಯವಲ್ಲ” ಎಂದು ಸಚಿವರು ಎಚ್ಚರಿಸಿದರು.

ಶಿವಮೊಗ್ಗ ಏರ್‌ಪೋರ್ಟ್ ಖಾಸಗೀಕರಣಕ್ಕೆ ವಿರೋಧ:

ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರ ಮುಚ್ಚಲು ಹೊರಟಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಆರೋಪಕ್ಕೆ ತಿರುಗೇಟು ನೀಡಿದ ಮಧು ಬಂಗಾರಪ್ಪ, “ಸುಮಾರು 600 ಕೋಟಿ ರೂ. ರಾಜ್ಯದ ಹಣದಲ್ಲಿ ನಿರ್ಮಾಣವಾದ ಈ ವಿಮಾನ ನಿಲ್ದಾಣವನ್ನು ನಷ್ಟಕ್ಕೆ ತಳ್ಳಿ, ಅಂಬಾನಿ-ಅದಾನಿಯಂತಹ ಖಾಸಗಿ ಉದ್ಯಮಿಗಳಿಗೆ ಮಾರಾಟ ಮಾಡುವ ಹುನ್ನಾರ ಬಿಜೆಪಿಯದ್ದಾಗಿದೆ. ಪ್ರಧಾನಿ ಮೋದಿ ಅವರು ಚುನಾವಣೆಗಾಗಿ ತರಾತುರಿಯಲ್ಲಿ ಉದ್ಘಾಟಿಸಿದ ಬಳಿಕ ಹಲವು ತಿಂಗಳು ವಿಮಾನ ಹಾರಾಟವೇ ಇರಲಿಲ್ಲ. ರಾಜ್ಯ ಸರ್ಕಾರದ ಪ್ರಯತ್ನದಿಂದ ವಿಮಾನ ಸಂಚಾರ ಆರಂಭವಾಯಿತು. ಯಾವುದೇ ಕಾರಣಕ್ಕೂ ವಿಮಾನ ನಿಲ್ದಾಣವನ್ನು ಖಾಸಗೀಕರಣಕ್ಕೆ ಬಿಟ್ಟುಕೊಡುವುದಿಲ್ಲ. ಈ ಬಗ್ಗೆ ಸಚಿವ ಎಂ.ಬಿ. ಪಾಟೀಲ್ ಅವರೊಂದಿಗೆ ಚರ್ಚಿಸಿದ್ದು, ಕೇಂದ್ರಕ್ಕೂ ಪತ್ರ ಬರೆಯಲಾಗುವುದು” ಎಂದರು.

ಬಿಜೆಪಿ ವಿರುದ್ಧ ವಾಗ್ದಾಳಿ:

ಕೇಂದ್ರ ತನಿಖಾ ಸಂಸ್ಥೆಗಳಾದ ಐಟಿ ಮತ್ತು ಇ.ಡಿ.ಯನ್ನು ದುರ್ಬಳಕೆ ಮಾಡಿಕೊಂಡು ಬಿಜೆಪಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ ಸಚಿವರು, ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ದ್ವೇಷದ ಪಠ್ಯಗಳನ್ನು ಬದಲಿಸಿ ಸಂವಿಧಾನದ ಆಶಯಗಳನ್ನು ಪಠ್ಯಪುಸ್ತಕಗಳಲ್ಲಿ ಅಳವಡಿಸಿದ್ದೇವೆ ಎಂದರು. ಇದೇ ವೇಳೆ, ಮುಂಬರುವ ಹಿರಿಯೂರು ಉಪಚುನಾವಣೆಯಲ್ಲಿ ಬಿಜೆಪಿ ಎಷ್ಟೇ ತಂತ್ರಗಾರಿಕೆ ನಡೆಸಿದರೂ ಕಾಂಗ್ರೆಸ್ ಪಕ್ಷವೇ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 


Share this with Friends

Related Post