ಬೆಂಗಳೂರು: ಮುಂಬರುವ ಬೆಳಗಾವಿ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ವೈಫಲ್ಯಗಳು, ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಪ್ರಬಲ ಹೋರಾಟ ರೂಪಿಸಲು ಬಿಜೆಪಿ ಮುಂದಾಗಿದೆ. ಈ ನಿಟ್ಟಿನಲ್ಲಿ ಸೋಮವಾರ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಕಚೇರಿಯಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯರ ಮಹತ್ವದ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ಸದನದ ಕಲಾಪಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದು ಹಾಗೂ ಸರ್ಕಾರದ ಲೋಪದೋಷಗಳನ್ನು ಅಂಕಿ-ಅಂಶ ಮತ್ತು ದಾಖಲೆಗಳ ಸಮೇತ ಸದನದ ಮುಂದಿಟ್ಟು ಉತ್ತರದಾಯಿತ್ವ ಬಯಸುವ ಕುರಿತು ಸುದೀರ್ಘ ಕಾರ್ಯತಂತ್ರ ಹೆಣೆಯಲಾಯಿತು.
ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು:
ಸದನದ ನಿಯಮಗಳ ಅಸ್ತ್ರ: ಪ್ರಶ್ನೋತ್ತರ ವೇಳೆಯಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಶ್ನೆಗಳನ್ನು ಕೇಳುವುದು, ನಿಯಮ 330ರ ಅಡಿಯಲ್ಲಿ ಸಾರ್ವಜನಿಕ ಮಹತ್ವದ ವಿಷಯಗಳ ಚರ್ಚೆಗೆ ಒತ್ತಾಯಿಸುವುದು ಹಾಗೂ ಅಗತ್ಯಬಿದ್ದರೆ ನಿಲುವಳಿ ಸೂಚನೆ ಮಂಡಿಸಿ ಗಂಭೀರ ಸಮಸ್ಯೆಗಳ ಬಗ್ಗೆ ಸರ್ಕಾರದಿಂದ ಉತ್ತರ ಪಡೆಯಲು ನಿರ್ಧರಿಸಲಾಯಿತು.
ಭ್ರಷ್ಟಾಚಾರ ಮತ್ತು ವೈಫಲ್ಯಗಳ ಅನಾವರಣ: ಸರ್ಕಾರದ ವಿರುದ್ಧ ಕೇಳಿಬರುತ್ತಿರುವ ಭ್ರಷ್ಟಾಚಾರ ಆರೋಪಗಳು, ಸ್ಥಗಿತಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು, ಹದಗೆಟ್ಟ ಕಾನೂನು ಸುವ್ಯವಸ್ಥೆ ಹಾಗೂ ರೈತರು, ಕಾರ್ಮಿಕರು, ಮಹಿಳೆಯರು ಮತ್ತು ಯುವಕರು ಎದುರಿಸುತ್ತಿರುವ ಸಂಕಷ್ಟಗಳನ್ನು ದಾಖಲೆ ಸಹಿತ ಪ್ರಸ್ತಾಪಿಸಲು ತೀರ್ಮಾನಿಸಲಾಯಿತು.
ಉತ್ತರ ಕರ್ನಾಟಕದ ಹಿತರಕ್ಷಣೆ: ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವುದರಿಂದ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳು, ಕೃಷಿ ಸಮಸ್ಯೆಗಳು, ಉದ್ಯೋಗ ಸೃಷ್ಟಿ, ಮೂಲಸೌಕರ್ಯ ಹಾಗೂ ಪ್ರಾದೇಶಿಕ ಅಸಮತೋಲನ ನಿವಾರಣೆಯಂತಹ ಬಹುಕಾಲದ ಬೇಡಿಕೆಗಳಿಗೆ ವಿಶೇಷ ಆದ್ಯತೆ ನೀಡಲು ಸಭೆ ಒಮ್ಮತದ ನಿರ್ಧಾರ ಕೈಗೊಂಡಿತು.
ಸಭೆಯಲ್ಲಿ ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಮಾಜಿ ಸಚಿವ ಸಿ.ಟಿ. ರವಿ, ಸದಸ್ಯರಾದ ಎಸ್.ವಿ. ಸಂಕನೂರು, ಎಂ.ಜಿ. ಮೂಳೆ, ಕೆ.ಎಸ್. ನವೀನ್, ಕೇಶವಪ್ರಸಾದ್ ಎಸ್, ಹೇಮಲತಾ ನಾಯಕ್ ಹಾಗೂ ಕೆ.ಎಂ. ಸುರೇಶ್ ಅವರು ಭಾಗವಹಿಸಿ ಸಲಹೆಗಳನ್ನು ನೀಡಿದರು.

