ಬೆಂಗಳೂರು: ಮಾಸಿಕ 15,000 ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ಐದು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಬೆಂಬಲಕ್ಕೆ ನಟಿ ಹಾಗೂ ಮಾಜಿ ಸಂಸದೆ ರಮ್ಯಾ (ದಿವ್ಯ ಸ್ಪಂದನ) ನಿಂತಿದ್ದಾರೆ.
ಆಶಾ ಕಾರ್ಯಕರ್ತೆಯರ ಪ್ರತಿಭಟನೆಯ ವಿಡಿಯೋವೊಂದನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ರಮ್ಯಾ, ಸರ್ಕಾರವು ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ. “ಸರ್ಕಾರದ ಭರವಸೆ ಆದಷ್ಟು ಬೇಗ ನಿರ್ಧಾರವಾಗುತ್ತದೆ ಎಂದು ಭಾವಿಸುತ್ತೇನೆ” ಎಂದು ಬರೆದುಕೊಳ್ಳುವ ಮೂಲಕ, ಮಹಿಳಾ ಆರೋಗ್ಯ ಕಾರ್ಯಕರ್ತೆಯರ ಹೋರಾಟಕ್ಕೆ ತಮ್ಮ ಧ್ವನಿಗೂಡಿಸಿದ್ದಾರೆ.
ಚಳಿಯನ್ನೂ ಲೆಕ್ಕಿಸದೆ ಬೀದಿಗಿಳಿದು ಪ್ರತಿಭಟಿಸುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಅವರಿಗೆ ನ್ಯಾಯಯುತವಾಗಿ ಸಿಗಬೇಕಾದ 15,000 ಮಾಸಿಕ ಗೌರವಧನವನ್ನು ಶೀಘ್ರವೇ ಘೋಷಿಸಬೇಕು ಎಂಬ ಆಶಯವನ್ನು ರಮ್ಯಾ ವ್ಯಕ್ತಪಡಿಸಿದ್ದಾರೆ. ರಮ್ಯಾ ಅವರ ಈ ಪೋಸ್ಟ್‌ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಹೋರಾಟನಿರತ ಕಾರ್ಯಕರ್ತೆಯರಿಗೆ ಮತ್ತಷ್ಟು ಬಲ ಬಂದಂತಾಗಿದೆ.

