ಚಿಕ್ಕಮಗಳೂರು: ಹಾಸನ ಜಿಲ್ಲೆಯಿಂದ ಚಿಕ್ಕಮಗಳೂರಿನ ಭದ್ರಾ ವನ್ಯಜೀವಿ ಅಭಯಾರಣ್ಯಕ್ಕೆ ಕಾಡಾನೆಗಳನ್ನು ಸ್ಥಳಾಂತರಿಸುವ ಸರ್ಕಾರದ ನಿರ್ಧಾರಕ್ಕೆ ಜಿಲ್ಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಸ್ವಪಕ್ಷದ ಸರ್ಕಾರದ ವಿರುದ್ಧವೇ ಚಿಕ್ಕಮಗಳೂರು ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರು ಸಿಡಿದೆದ್ದಿದ್ದಾರೆ. ಆನೆಗಳ ಸ್ಥಳಾಂತರ ಪ್ರಕ್ರಿಯೆಯನ್ನು ತಕ್ಷಣವೇ ಕೈಬಿಡದಿದ್ದರೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡುವ ಮೂಲಕ ಸರ್ಕಾರಕ್ಕೆ ದೊಡ್ಡ ಶಾಕ್ ನೀಡಿದ್ದಾರೆ.
ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಚಿಕ್ಕಮಗಳೂರು ಶಾಸಕ ಎಚ್.ಡಿ. ತಮ್ಮಯ್ಯ ಹಾಗೂ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಅವರು, ಅರಣ್ಯ ಇಲಾಖೆಯ ಕ್ರಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳೀಯರ ಜೀವಕ್ಕೆ ಕುತ್ತು ತರುವ ನಿರ್ಧಾರ:
“ಚಿಕ್ಕಮಗಳೂರು ಜಿಲ್ಲೆಯಲ್ಲಿ ಈಗಾಗಲೇ ಕಾಡಾನೆಗಳ ಹಾವಳಿ ಮಿತಿಮೀರಿದೆ. ರೈತರು ಮತ್ತು ಕಾಫಿ ಬೆಳೆಗಾರರು ಪ್ರತಿನಿತ್ಯ ಜೀವಭಯದಲ್ಲಿ ಬದುಕುವಂತಾಗಿದ್ದು, ಹಲವು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಹಾಸನ ಜಿಲ್ಲೆಯ ಕಾಡಾನೆಗಳನ್ನು ತಂದು ಭದ್ರಾ ಅಭಯಾರಣ್ಯಕ್ಕೆ ಬಿಡುವುದು ಗಾಯದ ಮೇಲೆ ಬರೆ ಎಳೆದಂತಾಗುತ್ತದೆ” ಎಂದು ಶಾಸಕರು ಕಿಡಿಕಾರಿದರು.
ಶಿವಲಿಂಗೇಗೌಡರ ವಿರುದ್ಧವೂ ಅಸಮಾಧಾನ:
ಹಾಸನ ಭಾಗದ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರ ಒತ್ತಡಕ್ಕೆ ಮಣಿದು ಆನೆಗಳನ್ನು ಇಲ್ಲಿಗೆ ಸ್ಥಳಾಂತರಿಸಲಾಗುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ, ಚಿಕ್ಕಮಗಳೂರಿನ ಶಾಸಕರು ಒಗ್ಗಟ್ಟು ಪ್ರದರ್ಶಿಸಿದ್ದಾರೆ. “ನಮ್ಮ ಕ್ಷೇತ್ರದ ಜನರ ಹಿತಾಸಕ್ತಿ ನಮಗೆ ಮುಖ್ಯ. ಜನರ ಪ್ರಾಣಕ್ಕೆ ಕುತ್ತು ತರುವಂತಹ ಯಾವುದೇ ಯೋಜನೆಯನ್ನು ನಾವು ಸಹಿಸುವುದಿಲ್ಲ. ಸರ್ಕಾರ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು; ಇಲ್ಲದಿದ್ದರೆ ನಾವು ಮೂವರೂ ಒಟ್ಟಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಿದ್ದೇವೆ” ಎಂದು ನಯನಾ ಮೋಟಮ್ಮ, ತಮ್ಮಯ್ಯ ಮತ್ತು ರಾಜೇಗೌಡ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಜಿಲ್ಲೆಯ ಕಾಂಗ್ರೆಸ್ ಶಾಸಕರ ಈ ದಿಢೀರ್ ನಿರ್ಧಾರವು ರಾಜ್ಯ ರಾಜಕಾರಣದಲ್ಲಿ ಹಾಗೂ ಅರಣ್ಯ ಇಲಾಖೆಯಲ್ಲಿ ತೀವ್ರ ಸಂಚಲನ ಮೂಡಿಸಿದೆ.

